Home ದೇಶ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ರಾಜೀನಾಮೆ ಕೊಟ್ಟಿದ್ದೇನೆ: ಧರ್ಮೇಂದ್ರ ಪ್ರಧಾನ್

ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ರಾಜೀನಾಮೆ ಕೊಟ್ಟಿದ್ದೇನೆ: ಧರ್ಮೇಂದ್ರ ಪ್ರಧಾನ್

0

ದೆಹಲಿ: ನೀಟ್-ಯುಜಿ (NEET-UG) 2026 ರ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗಳು ವ್ಯಕ್ತವಾಗುತ್ತಿದ್ದಂತೆಯೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೇಶದ ಯುವಜನತೆ “ಗೊಂದಲದ ಜಾಲದಲ್ಲಿ ಸಿಲುಕಿಕೊಳ್ಳಬಾರದು” ಮತ್ತು ವಿದ್ಯಾರ್ಥಿಗಳ ಬೃಹತ್ ಹಿತದೃಷ್ಟಿಯನ್ನು ಕಾಯುವ ಉದ್ದೇಶದಿಂದ ತಾವು ರಾಜೀನಾಮೆ ನೀಡುತ್ತಿರುವುದಾಗಿ ಪ್ರಧಾನ್ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ, ಶಿಕ್ಷಣ ಕ್ಷೇತ್ರದೊಂದಿಗಿನ ತಮ್ಮ ನಾಲ್ಕು ದಶಕಗಳ ಸುದೀರ್ಘ ನಂಟನ್ನು ಸ್ಮರಿಸಿರುವ ಪ್ರಧಾನ್, ಭಾರತದ ಯುವಜನತೆಯ ಆಕಾಂಕ್ಷೆಗಳಿಗೆ ಸದಾ ಬದ್ಧವಾಗಿರುವುದಾಗಿ ಪುನರುಚ್ಚರಿಸಿದ್ದಾರೆ.

“ನಾಲ್ಕಕ್ಕೂ ಹೆಚ್ಚು ದಶಕಗಳಿಂದ ನಾನು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಿಕ್ಷಣ ಕ್ಷೇತ್ರದ ಸುಧಾರಣೆಯೊಂದಿಗೆ ನಿಕಟವಾಗಿ ಗುರುತಿಸಿಕೊಂಡಿದ್ದೇನೆ. ಬಲವಾದ, ಒಳಗೊಳ್ಳುವಿಕೆಯ ಮತ್ತು ಭವಿಷ್ಯದ ದೃಷ್ಟಿಕೋನ ಹೊಂದಿರುವ ಶಿಕ್ಷಣ ವ್ಯವಸ್ಥೆಯು ಸಮರ್ಥ ರಾಷ್ಟ್ರದ ಅಡಿಪಾಯ ಎಂದು ನಾನು ಯಾವಾಗಲೂ ನಂಬಿದ್ದೇನೆ” ಎಂದು ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮೇ 3 ರಂದು ನಡೆದ ನೀಟ್-ಯುಜಿ ಪರೀಕ್ಷೆಯಲ್ಲಿ ಲೋಪದೋಷಗಳು ಕಂಡುಬಂದ ತಕ್ಷಣವೇ ಕೇಂದ್ರ ಸರ್ಕಾರ ಶೀಘ್ರ ಕ್ರಮ ಕೈಗೊಂಡಿತ್ತು ಎಂಬುದನ್ನು ನೆನಪಿಸಿದ ಅವರು, “ಮೇ 3, 2026 ರಂದು ನಡೆದ ನೀಟ್-ಯುಜಿ ಪರೀಕ್ಷೆಯಲ್ಲಿ ಅಕ್ರಮಗಳು ಕಂಡುಬಂದ ತಕ್ಷಣ ಭಾರತ ಸರ್ಕಾರವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿತು. ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತು, ಪರೀಕ್ಷೆಯನ್ನು ರದ್ದುಗೊಳಿಸಿ ಮರುಪರೀಕ್ಷೆಯ ದಿನಾಂಕವನ್ನು ಘೋಷಿಸಿತು. ಇದರ ಜೊತೆಗೆ, ಮುಂದಿನ ವರ್ಷದಿಂದ ಪರೀಕ್ಷೆಯನ್ನು ಕಂಪ್ಯೂಟರ್ ಆಧಾರಿತ ಪರೀಕ್ಷಾ (CBT) ಮಾದರಿಯಲ್ಲಿ ನಡೆಸಲು ನಿರ್ಧರಿಸಲಾಯಿತು” ಎಂದಿದ್ದಾರೆ.

ಸಂಬಲ್‌ಪುರ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಪ್ರಧಾನ್, ಮರುಪರೀಕ್ಷೆಯ ಸಂದರ್ಭದಲ್ಲಿ 20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಯುವುದೇ ಸರ್ಕಾರದ ಮೊದಲ ಆದ್ಯತೆಯಾಗಿತ್ತು ಎಂದು ಪ್ರತಿಪಾದಿಸಿದ್ದಾರೆ.

“ಈ ಅವಧಿಯಲ್ಲಿ 20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವುದು ನಮ್ಮ ಪ್ರಮುಖ ಕಾಳಜಿಯಾಗಿತ್ತು. ಮೊದಲ ದಿನದಿಂದಲೂ ನಾನು ಪರಿಸ್ಥಿತಿಯ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದೇನೆ ಮತ್ತು ಎಂದಿಗೂ ಅದರಿಂದ ಹಿಂದೆ ಸರಿದಿಲ್ಲ. ಪರೀಕ್ಷಾ ವಿವಾದದಿಂದಾಗಿ ಯಾವುದೇ ಪ್ರತಿಭಾವಂತ ವಿದ್ಯಾರ್ಥಿಯ ಭವಿಷ್ಯಕ್ಕೆ ಧಕ್ಕೆಯಾಗಬಾರದು ಎಂಬುದು ನನ್ನ ದೃಢ ಸಂಕಲ್ಪವಾಗಿತ್ತು” ಎಂದು ಹೇಳಿದ್ದಾರೆ.

ಜುಲೈ 16 ರಂದು ಪ್ರಕಟವಾದ ನೀಟ್-ಯುಜಿ ಫಲಿತಾಂಶಗಳು ತೃಪ್ತಿಕರವಾಗಿದ್ದು, ಆರ್ಥಿಕವಾಗಿ ಹಿಂದುಳಿದ ವರ್ಗಗಳ ಹಲವು ಪ್ರತಿಭಾವಂತ ವಿದ್ಯಾರ್ಥಿಗಳು ಯಶಸ್ಸು ಸಾಧಿಸಿದ್ದಾರೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಈ ವಿಷಯದ ಸುತ್ತ ನಡೆದ ರಾಜಕೀಯ ಬೆಳವಣಿಗೆಗಳ ಕುರಿತು ಬೇಸರ ವ್ಯಕ್ತಪಡಿಸಿದ ಧರ್ಮೇಂದ್ರ ಪ್ರಧಾನ್, ಕೆಲವರು ವಿದ್ಯಾರ್ಥಿಗಳನ್ನು ಹಾದಿತಪ್ಪಿಸಲು ಯತ್ನಿಸಿದರು ಎಂದು ಆರೋಪಿಸಿದ್ದಾರೆ. “ಈ ಅವಧಿಯಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿದ್ದ ಹಲವರು ಅಡೆತಡೆಗಳನ್ನು ಸೃಷ್ಟಿಸಲು ಮತ್ತು ವಿದ್ಯಾರ್ಥಿಗಳನ್ನು ಹಾದಿತಪ್ಪಿಸಲು ಯತ್ನಿಸಿದ್ದು ನನಗೆ ತೀವ್ರ ದುಃಖ ತಂದಿದೆ” ಎಂದು ಬರೆದುಕೊಂಡಿದ್ದಾರೆ.

ತಮ್ಮ ರಾಜೀನಾಮೆಗೆ ಕಾರಣಗಳನ್ನು ವಿವರಿಸಿದ ಅವರು, ಪ್ರಸ್ತುತ ನಡೆಯುತ್ತಿರುವ ಪ್ರತಿಭಟನೆಗಳನ್ನು ದೇಶವಿರೋಧಿ ಶಕ್ತಿಗಳು ತಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳಬಾರದು ಮತ್ತು ವಿದ್ಯಾರ್ಥಿಗಳು ತಮ್ಮ ವ್ಯಾಸಂಗದತ್ತ ಗಮನಹರಿಸಲು ಸಾಧ್ಯವಾಗಬೇಕು ಎಂದು ಒತ್ತು ನೀಡಿದ್ದಾರೆ.

“ಕಳೆದ 10 ದಿನಗಳ ಘಟನೆಗಳು ನನಗೆ ತೀವ್ರ ನೋವುಂಟು ಮಾಡಿವೆ. ಇದು ನನಗೆ ವೈಯಕ್ತಿಕ ಪ್ರತಿಷ್ಠೆಯ ವಿಷಯವಲ್ಲ. ದೇಶದ ಯುವಶಕ್ತಿಯು ಗೊಂದಲದ ಜಾಲದಲ್ಲಿ ಸಿಲುಕಿಕೊಳ್ಳಲು ಬಿಡುವುದಿಲ್ಲ ಎಂಬುದು ನನ್ನ ನಿರ್ಧಾರ. ಜಂತರ್ ಮಂತರ್ ಹಾಗೂ ದೇಶದ ಇತರೆಡೆ ಸೃಷ್ಟಿಯಾಗಿರುವ ಪರಿಸ್ಥಿತಿಯನ್ನು ದೇಶವಿರೋಧಿ ಶಕ್ತಿಗಳು ದುರ್ಬಳಕೆ ಮಾಡಿಕೊಳ್ಳಬಾರದು. ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ನಾನು ಗೌರವಾನ್ವಿತ ಪ್ರಧಾನಿಯವರಿಗೆ ನನ್ನ ರಾಜೀನಾಮೆಯನ್ನು ಕಳುಹಿಸಿಕೊಟ್ಟಿದ್ದೇನೆ” ಎಂದು ಹೇಳಿದ್ದಾರೆ.

ಶಿಕ್ಷಣ ಸಚಿವನಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ ಅವರು, ಸಂಪುಟದ ಸಹೋದ್ಯೋಗಿಗಳು, ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

You cannot copy content of this page

Exit mobile version