ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ (SIR) ಕುರಿತು ನಡೆಯುತ್ತಿರುವ ವಿರೋಧಕ್ಕೆ ಮತ್ತಷ್ಟು ರಾಜಕೀಯ ಮತ್ತು ಸಾಮಾಜಿಕ ಗಮನ ಸೆಳೆಯುವ ಬೆಳವಣಿಗೆಯೊಂದು ನಡೆದಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಕ್ಟೋಬರ್ 8ರಂದು ನಡೆಯಲಿರುವ SIR ವಿರೋಧಿ ಪ್ರತಿಭಟನೆಯಲ್ಲಿ ಯೂಟ್ಯೂಬರ್ ಹಾಗೂ ರಾಜಕೀಯ ವಿಶ್ಲೇಷಕ ಧ್ರುವ್ ರಾಠಿ ಭಾಗವಹಿಸಲಿದ್ದಾರೆ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ತಿಳಿಸಿದ್ದಾರೆ.
ಪ್ರಕಾಶ್ ರಾಜ್ ಅವರು ಬುಧವಾರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಧ್ರುವ್ ರಾಠಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ರಾಠಿ ಮೊದಲ ಬಾರಿಗೆ ಬಹಿರಂಗ ಸಾರ್ವಜನಿಕ ಪ್ರತಿಭಟನೆಯೊಂದರಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಅಕ್ಟೋಬರ್ 8ರಂದು ಬೆಳಗ್ಗೆ 10.30ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಾಗೂ ‘ಪೀಪಲ್ಸ್ ಟ್ರಿಬ್ಯೂನಲ್’ ಆಯೋಜಿಸಲಾಗಿದೆ. SIR ಪ್ರಕ್ರಿಯೆಯಿಂದ ಮತದಾರರ ಪಟ್ಟಿಯಿಂದ ಹೆಸರುಗಳು ತಪ್ಪಾಗಿ ತೆಗೆದುಹಾಕಲಾಗಿದೆ ಎಂದು ಆರೋಪಿಸುತ್ತಿರುವವರು ಸೇರಿದಂತೆ ವಿವಿಧ ನಾಗರಿಕ ಸಂಘಟನೆಗಳು ಮತ್ತು ಯುವ ಸಂಘಟನೆಗಳ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಪ್ರತಿಭಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವಂತೆ ಪ್ರಕಾಶ್ ರಾಜ್ ಮನವಿ ಮಾಡಿದ್ದಾರೆ. SIR ಕುರಿತು ಸಾರ್ವಜನಿಕರಿಂದ ಕೇಳಿಬರುತ್ತಿರುವ ಆಕ್ಷೇಪಗಳು ಮತ್ತು ಮತದಾರರ ಪಟ್ಟಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪೀಪಲ್ಸ್ ಟ್ರಿಬ್ಯೂನಲ್‌ನಲ್ಲಿ ಚರ್ಚಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ‘ಕಾಕ್ರೋಚ್ ಜನತಾ ಪಕ್ಷ’ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಪ್ರತಿಭಟನೆಯ ಭಾಗವಾಗಿ ‘ಚಪ್ಪಲ್ ಪ್ರತಿಭಟನೆ’ ನಡೆಸಲಾಗುತ್ತಿದ್ದು, SIR ಪ್ರಕ್ರಿಯೆಯಿಂದ ತೊಂದರೆಗೊಳಗಾದವರು ಹಾಗೂ ಸ್ಥಳೀಯ ನಿವಾಸಿಗಳೊಂದಿಗೆ ಸಂವಾದ ನಡೆಸಲು ಪೀಪಲ್ಸ್ ಟ್ರಿಬ್ಯೂನಲ್ ಆಯೋಜಿಸಲಾಗಿದೆ.
ಈ ಕುರಿತು ಮಾತನಾಡಿರುವ ಪ್ರಕಾಶ್ ರಾಜ್, ಇದು ಕೇವಲ ಮತದಾನದ ವಿಚಾರವಲ್ಲ; ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಸಂಬಂಧಿಸಿದ ವಿಚಾರ ಎಂದು ತಮ್ಮ ವಿಡಿಯೋದಲ್ಲಿ ಹೇಳಿದ್ದಾರೆ. ಬೆಂಗಳೂರಿನಲ್ಲಿರುವ SIRಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿರುವವರು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಅವರು ಕರೆ ನೀಡಿದ್ದಾರೆ.
ಇನ್ನು ಧ್ರುವ್ ರಾಠಿ ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಕುರಿತು ವಿವರಣಾತ್ಮಕ ವಿಡಿಯೋಗಳನ್ನು ಪ್ರಕಟಿಸುವ ಯೂಟ್ಯೂಬರ್ ಆಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅವರ ರಾಜಕೀಯ ವಿಶ್ಲೇಷಣೆಗಳು ಹಾಗೂ ಸಾಮಾಜಿಕ ಮಾಧ್ಯಮದ ಹೇಳಿಕೆಗಳು ವ್ಯಾಪಕ ಚರ್ಚೆಗೆ ಕಾರಣವಾಗಿವೆ.
ಅಕ್ಟೋಬರ್ 8ರ ಬೆಂಗಳೂರಿನ ಕಾರ್ಯಕ್ರಮದ ಬಳಿಕ ಅಕ್ಟೋಬರ್ 10ರಂದು ದೆಹಲಿಯಲ್ಲೂ ಪ್ರತಿಭಟನೆ ನಡೆಸಲು ಅಭಿಜೀತ್ ದೀಪ್ಕೆ ನೇತೃತ್ವದ ಸಂಘಟನೆ ಮುಂದಾಗಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಸಂಘಟಕರು ತಿಳಿಸಿದ್ದಾರೆ.
ಹೀಗಾಗಿ ಗುರುವಾರ ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿರುವ SIR ವಿರೋಧಿ ಪ್ರತಿಭಟನೆಗೆ ಧ್ರುವ್ ರಾಠಿ ಸೇರಿದಂತೆ ವಿವಿಧ ಸಾಮಾಜಿಕ ಮತ್ತು ನಾಗರಿಕ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದತ್ತ ಗಮನ ಹರಿದಿದೆ.
