ವಿಜಯಪುರ: ಇಂಡಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸದಿರುವುದನ್ನು ವಿರೋಧಿಸಿ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ತಾಲೂಕಿನಲ್ಲಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಹಾಗೂ ರೈತರ ಬದುಕಿನ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಇಂಡಿಯನ್ನು ಬರಪೀಡಿತ ತಾಲೂಕು ಎಂದು ಘೋಷಿಸುವಂತೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಗಮನಕ್ಕೆ ಹಲವು ಬಾರಿ ತರಲಾಗಿತ್ತು. ಆದರೆ ತಮ್ಮ ಮನವಿಗೆ ಸರ್ಕಾರದಿಂದ ನಿರೀಕ್ಷಿತ ಸ್ಪಂದನೆ ದೊರೆಯದಿರುವುದು ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ.
ಕ್ಷೇತ್ರದ ಜನರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಅವರ ಪರವಾಗಿ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಹೀಗಾಗಿ ಶಾಸಕನಾಗಿ ಮುಂದುವರಿದು ಕ್ಷೇತ್ರದ ಜನರಿಗೆ ನ್ಯಾಯ ಒದಗಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಯಶವಂತರಾಯಗೌಡ ಪಾಟೀಲ್ ಬೇಸರ ವ್ಯಕ್ತಪಡಿಸಿದ್ದಾರೆ.
‘ಸೌಮ್ಯ ಸ್ವಭಾವದ ನನ್ನಂತಹವರಿಗೆ ಸರ್ಕಾರದಲ್ಲಿ ಮನ್ನಣೆ ಇಲ್ಲ. ಬಲಾಢ್ಯರಿಗೆ ಮಾತ್ರ ಮನ್ನಣೆ ಸಿಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ನನ್ನ ಕ್ಷೇತ್ರದ ಜನರ ಸಮಸ್ಯೆಗಳಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ’ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.
ಬರದ ಪರಿಣಾಮ ರೈತರು ಎದುರಿಸುತ್ತಿರುವ ಸಂಕಷ್ಟದ ಹಿನ್ನೆಲೆಯಲ್ಲಿ ಇಂಡಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕೆಂಬ ಬೇಡಿಕೆ ಇತ್ತು. ಸರ್ಕಾರದ ಗಮನಕ್ಕೆ ವಿಷಯವನ್ನು ತಂದಿದ್ದರೂ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.
ರಾಜ್ಯ ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲೇ ಆಡಳಿತಾರೂಢ ಕಾಂಗ್ರೆಸ್ ಶಾಸಕ ರಾಜೀನಾಮೆ ನೀಡಿರುವುದು ರಾಜ್ಯ ರಾಜಕೀಯದಲ್ಲಿ ಗಮನ ಸೆಳೆದಿದೆ. ಬರಪೀಡಿತ ತಾಲೂಕುಗಳ ಘೋಷಣೆ ವಿಚಾರದಲ್ಲಿ ಸರ್ಕಾರದ ವಿರುದ್ಧ ಆಡಳಿತ ಪಕ್ಷದ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.
