Monday, July 8, 2024

ಸತ್ಯ | ನ್ಯಾಯ |ಧರ್ಮ

ಜಿಲ್ಲಾಧಿಕಾರಿಗಳು ತಾವು ಮಹಾರಾಜರು ಎನ್ನುವ ಭಾವನೆಯನ್ನು ಬಿಡಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಜು 8 : ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ DC ಮತ್ತು CEO ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಈ ಸೂಚನೆ ನೀಡಿದರು.

ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನ ಸಾಮಾನ್ಯರಿಗೆ ತಲುಪಿಸಲು DC-SP-CEO ಗಳು ಕ್ರಿಯಾಶೀಲತೆಯಿಂದ, ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರ್ಕಾರದ ಕಾಳಜಿಗಳು ಜನರಿಗೆ ತಲುಪಲು ಸಾಧ್ಯ ಎಂದರು.

ರಾಜ್ಯದಲ್ಲಿ ಡೆಂಗ್ಯು ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕೆಲಸ ಮಾಡಿ. DC, DHO ಗಳು ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆ ಮಾಡಿ ಕ್ಷಿಪ್ರವಾಗಿ ಕೆಲಸ ಮಾಡಿ ಎಂದು ಸೂಚಿಸಿದರು.

ಇಷ್ಟು ದಿನ ಉದಾಸೀನ, ನಿರ್ಲಕ್ಷ್ಯಕ್ಕೆ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.

ಅನರ್ಹ ಬಿಪಿಎಲ್‌ ಕಾರ್ಡುಗಳನ್ನು ರದ್ದುಪಡಿಸಿ

ರಾಜ್ಯದಲ್ಲಿ ಶೇ. 80 ರಷ್ಟು ಬಿಪಿಎಲ್‌ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು. ಆದರೆ ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ನೀಡಿದ್ದೇವೆ. ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್‌ ಕಾರ್ಡು ಒದಗಿಸಬೇಕು ಎಂದು ಸಿಎಂ ಸೂಚಿಸಿದರು

Related Articles

ಇತ್ತೀಚಿನ ಸುದ್ದಿಗಳು