ಬೆಂಗಳೂರಿನಲ್ಲಿ ಚುನಾವಣಾ ಆಯೋಗದ ಕಚೇರಿ ಎದುರು ಸಿಎಂ ಡಿ.ಕೆ. ಶಿವಕುಮಾರ್ ಧರಣಿ: ಮತದಾರರ ಪಟ್ಟಿ ತಿರುಚಿದ ಆರೋಪದಡಿ ಎಫ್‌ಐಆರ್ ದಾಖಲಿಸಲು ಆಗ್ರಹ

ಬೆಂಗಳೂರು: ಕರ್ನಾಟಕದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ನಕಲಿ ಫಾರ್ಮ್ 7 ಅರ್ಜಿಗಳನ್ನು ಬಳಸಿ ಭಾರಿ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವರು ರಾಜ್ಯ ಮುಖ್ಯ ಚುನಾವಣಾಧಿಕಾರಿ (ಸಿಇಒ) ಕಚೇರಿಯಲ್ಲಿ ದಿಢೀರ್ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ. ತಮಗೆ ನ್ಯಾಯ ಸಿಗುವವರೆಗೂ ಮತ್ತು ತಪ್ಪಿತಸ್ಥರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಚುನಾವಣಾ ಆಯೋಗವು ಪೊಲೀಸ್ ದೂರು ನೀಡುವವರೆಗೂ ಸ್ಥಳದಿಂದ ಕದಲುವುದಿಲ್ಲ ಎಂದು ಅವರು ಪಟ್ಟು ಹಿಡಿದಿದ್ದಾರೆ.

ಪ್ರಕರಣದ ಗಂಭೀರತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಇಂದು ಸಂಜೆ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ಮುಂದೂಡಿದ್ದಾರೆ. ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ಈ ಅಕ್ರಮ ಆರಂಭವಾಗಿದ್ದು, ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲೂ ತಲಾ 10,000 ಮತದಾರರ ಹೆಸರುಗಳನ್ನು ಅಳಿಸಿಹಾಕಲು ಬಿಜೆಪಿ ಕಾರ್ಯಕರ್ತರು ಮತ್ತು ಏಜೆಂಟರು ಯತ್ನಿಸುತ್ತಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಈ ಅಕ್ರಮಕ್ಕೆ ಸಂಬಂಧಿಸಿದ ಸಾಕ್ಷ್ಯಗಳು ಹಾಗೂ ತಪ್ಪೊಪ್ಪಿಗೆ ಪತ್ರಗಳನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಸಿರುವುದಾಗಿ ತಿಳಿಸಿದ ಅವರು, “ಸಾಮಾನ್ಯ ಕಾರ್ಯಕರ್ತರಿಗೆ ಮತದಾರರ ಗೌಪ್ಯ ಮತ್ತು ವೈಯಕ್ತಿಕ ವಿವರಗಳು ಹೇಗೆ ಸಿಕ್ಕವು? ಇದರ ಹಿಂದೆ ಯಾರಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ. ಸಿಎಂ ಹಾಗೂ ಸಚಿವರ ತೀವ್ರ ಪ್ರತಿಭಟನೆಯ ಬೆನ್ನಲ್ಲೇ ಚುನಾವಣಾ ಆಯೋಗವು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ (ಡಿಸಿ) ತುರ್ತು ವಿಡಿಯೋ ಕಾನ್ಫರೆನ್ಸ್ ಸಭೆ ಕರೆದಿದೆ. ದೂರು ದಾಖಲಾಗಿ ಕ್ರಮ ಕೈಗೊಳ್ಳುವವರೆಗೆ ಧರಣಿ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು