ಹೋರಿ ದಾಳಿಯಲ್ಲಿ ಗಾಯಗೊಂಡವರ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ, ಎಫ್ಐಆರ್ ದಾಖಲು

ಬೆಳ್ತಂಗಡಿ: ಮನೆಯಲ್ಲಿದ್ದ ಹೋರಿಯ ದಾಳಿಗೆ ತುತ್ತಾಗಿ ಗಾಯಗೊಂಡಿದ್ದ ಯುವಕನೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟ ಘಟನೆ ತಾಲೂಕಿನಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಚಿಕಿತ್ಸೆ ನೀಡಿದ ವೈದ್ಯರ ನಿರ್ಲಕ್ಷ್ಯದಿಂದಾಗಿ ಮೃತ್ಯು ಸಂಭವಿಸಿದೆ ಎಂಬ ಕುಟುಂಬದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ನಿವಾಸಿ ಮಹಮ್ಮದ್ ಶರೀಫ್ ಪಿ. (35) ಅವರು ಮೇ 14ರಂದು ರಾತ್ರಿ ತಮ್ಮ ಮನೆಯಲ್ಲಿದ್ದ ಹೋರಿಯಿಂದ ಹಾಯಿಸಿಕೊಂಡು ತೀವ್ರವಾಗಿ ಗಾಯಗೊಂಡರು. ಕೂಡಲೇ ಅವರನ್ನು ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಲ್ಲಿನ ವೈದ್ಯರು ನಿರ್ಲಕ್ಷ್ಯದಿಂದ ಚಿಕಿತ್ಸೆ ನೀಡಿದ ಕಾರಣ ಮಹಮ್ಮದ್ ಶರೀಫ್ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿತು ಎಂದು ಕುಟುಂಬ ಆರೋಪಿಸಿದೆ.

ಪರಿಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಮೇ 16ರಂದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ಉತ್ತಮ ಚಿಕಿತ್ಸೆ ನೀಡಲಾಯಿತಾದರೂ ಅದು ಫಲ ನೀಡಲಿಲ್ಲ. ಮೇ 20ರಂದು ಮಹಮ್ಮದ್ ಶರೀಫ್ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ಮೃತರ ಸಹೋದರ ನಾಸಿರುದ್ದೀನ್ ಪಿ. ಅವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸೂರ್ಯ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದ ಚಿಕಿತ್ಸೆಯೇ ತಮ್ಮ ಸಹೋದರನ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ. ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ವೈದ್ಯಕೀಯ ನಿರ್ಲಕ್ಷ್ಯದ ಆರೋಪಗಳ ಸತ್ಯಾಸತ್ಯತೆ ಪರಿಶೀಲಿಸಲು ವೈದ್ಯಕೀಯ ತಂಡವನ್ನು ರಚಿಸುವಂತೆ ಸಂಬಂಧಪಟ್ಟ ಇಲಾಖೆಗೆ ಈಗಾಗಲೇ ಪತ್ರ ಬರೆಯಲಾಗಿದ್ದು, ತಂಡದ ವರದಿ ಬಂದ ನಂತರ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಳ್ತಂಗಡಿ ಪೊಲೀಸರು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು