Home ರಾಜ್ಯ ತುಮಕೂರು ಡಾ.ಕೆ.ಸುಧಾಕರ್ ಅವರು ಕೂಡಲೇ ರಾಜೀನಾಮೆ ನೀಡಬೇಕು: ಹೆಚ್‌ಡಿಕೆ

ಡಾ.ಕೆ.ಸುಧಾಕರ್ ಅವರು ಕೂಡಲೇ ರಾಜೀನಾಮೆ ನೀಡಬೇಕು: ಹೆಚ್‌ಡಿಕೆ

0

ತುಮಕೂರು: ಹೆರಿಗೆ ನೋವಿನಿಂದ ನರಳುತ್ತಿದ್ದ ಬಳಲುತ್ತಿದ್ದ ತುಮಕೂರಿನ ಭಾರತೀನಗರದ ಶ್ರೀಮತಿ ಕಸ್ತೂರಿ (30) ಎಂಬ ಮಹಿಳೆ ವೈದ್ಯೆಯ ನಿರ್ಲಕ್ಷ್ಯದ ಕಾರಣದಿಂದ ಸಾವನ್ನಪ್ಪಿದ್ದಾಳೆ. ಈ ಹಿನ್ನಲೆಯಲ್ಲಿ ಟ್ವೀಟ್‌ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ʼಡಾ.ಕೆ.ಸುಧಾಕರ್ ಅವರು ಕೂಡಲೇ ರಾಜೀನಾಮೆ ನೀಡಲೇಬೇಕುʼ ಎಂದು ಕಿಡಿಕಾರಿದ್ದಾರೆ.

ಪ್ರಸವ ವೇದನೆಯಿಂದ ಬಳಲುತ್ತಿದ್ದ ತುಮಕೂರಿನ ಭಾರತೀನಗರದ ಶ್ರೀಮತಿ ಕಸ್ತೂರಿ (30) ಎಂಬ ಮಹಿಳೆಯನ್ನು ನಿನ್ನೆ ತಡರಾತ್ರಿ ಸ್ಥಳೀಯರು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಕರ್ತವ್ಯದಲ್ಲಿದ್ದ ವೈದ್ಯೆ, ಆ ಗರ್ಭಿಣಿಗೆ ಹೆರಿಗೆ ಮಾಡಿಸದೆ ತಾಯಿ ಕಾರ್ಡ್ ಮಾಡಿಸಿಲ್ಲ ಎನ್ನುವ ನೆಪ ಹೇಳಿ ನಿರ್ದಯವಾಗಿ ವಾಪಸ್ ಕಳಿಸಿದ್ದಾರೆ. ಬೇರೆ ದಾರಿ ಇಲ್ಲದೆ, ಹಣವೂ ಇಲ್ಲದೆ ಹೊಟ್ಟೆ ನೋವಿನಲ್ಲೇ ಮನೆಗೆ ವಾಪಸ್ ಬಂದಿದ್ದ ಆ ಮಹಿಳೆ, ಇಡೀ ರಾತ್ರಿ ನರಳಿನರಳಿ ಬೆಳಗಿನಜಾವ ಒಂದು ಮಗುವಿಗೆ ಜನ್ಮ ನೀಡಿದ್ದಾರೆ. ಮತ್ತೊಂದು ಮಗುವಿಗೆ ಜನ್ಮ ನೀಡುವಾಗ ತೀವ್ರ ರಕ್ತಸ್ರಾವವಾಗಿ ಎರಡು ಮಕ್ಕಳ ಜತೆಗೆ ತಾನೂ ಸಾವನ್ನಪ್ಪಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಮಾಜಿ ಮುಖ್ಯಮಂತ್ರಿ  ಹೆಚ್.ಡಿ ಕುಮಾರಸ್ವಾಮಿ, ʼ ಆರೋಗ್ಯ ಇಲಾಖೆ ಅದೆಷ್ಟು ಹಾಳಾಗಿ ಹೋಗಿದೆ ಎನ್ನುವುದಕ್ಕೆ ಇದಕ್ಕಿಂತ ದುರಂತ ಸಾಕ್ಷಿ ಇನ್ನೊಂದಿಲ್ಲ. ಈ ಹದಗೆಟ್ಟ ಆರೋಗ್ಯ ವ್ಯವಸ್ಥೆ ತುಮಕೂರಿನಲ್ಲಿ ಅನಾಥ ಬಾಣಂತಿಯ ಜತೆಗೇ ಹುಟ್ಟಿದೊಡನೆ ಎರಡು ಹಸುಗೂಸುಗಳನ್ನು ಬಲಿ ತೆಗೆದುಕೊಂಡಿದೆ. ಅಭಿವೃದ್ಧಿ, ಆವಿಷ್ಕಾರ ಎಂದೆಲ್ಲ ಬೀಗುವ ಈ ಸರಕಾರ ನಾಚಿಕೆಯಿಂದ ತಲೆ ತಗ್ಗಿಸಬೇಕಿದೆʼ ಎಂದು ಹೆಚ್‌ಡಿಕೆ ಕಿಡಿಕಾರಿದ್ದಾರೆ.

ʼಬಾಣಂತಿ ಮತ್ತು ಅವಳಿ ಹಸುಗೂಸುಗಳ ಧಾರುಣ ಸಾವಿಗೆ ಆ ವೈದ್ಯೆ ಮತ್ತು ಸರಕಾರವೇ ನೇರ ಹೊಣೆ. ಸ್ವತಃ ವೈದ್ಯರೆಂದು ಹೇಳಿಕೊಳ್ಳುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಉಸ್ತುವಾರಿಯಲ್ಲಿ ಆರೋಗ್ಯ ಇಲಾಖೆ ಎಷ್ಟರ ಮಟ್ಟಿಗೆ ಹಳ್ಳಹಿಡಿದು ಹೋಗಿದೆ ಎನ್ನುವುದಕ್ಕೆ ಈ ಸಾವುಗಳೇ ಸಾಕ್ಷಿ. ಮಾನವೀಯತೆ ಇಲ್ಲದ ವೈದ್ಯೆ ಹಾಗೂ ಸರಕಾರವೇ ಮಾಡಿದ ಕೊಲೆಗಳಿವು. ಕೂಡಲೇ ಆ ವೈದ್ಯೆಯನ್ನು ಸೇವೆಯಿಂದ ವಜಾ ಮಾಡಬೇಕು. ಕರ್ತವ್ಯಲೋಪ ಎಸಗಿದ ಇತರೆ ಸಿಬ್ಬಂದಿಗೂ ತಕ್ಕಶಾಸ್ತಿ ಮಾಡಬೇಕು. ಜಿಲ್ಲಾಸ್ಪತ್ರೆಯ ಅಧಿಕ್ಷರನ್ನೂ ಇದಕ್ಕೆ ಹೊಣೆ ಮಾಡಿ ಮನೆಗೆ ಕಳಿಸಬೇಕುʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ʼಈ ಸರಕಾರಿ ಕೊಲೆಗಳಿಗೆ ಆರೋಗ್ಯ ಸಚಿವರು ನೈತಿಕ ಹೊಣೆ ಹೊರಲೇಬೇಕು, ಡಾ.ಕೆ.ಸುಧಾಕರ್ ಅವರು ಕೂಡಲೇ ರಾಜೀನಾಮೆ ನೀಡಲೇಬೇಕು, ಇಲ್ಲವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಚಿವರನ್ನು ಸಂಪುಟದಿಂದ ವಜಾ ಮಾಡಬೇಕು. ತಬ್ಬಲಿಯಾದ ಮಗುವಿನ ಜವಾಬ್ದಾರಿಯನ್ನು ಸರಕಾರವೇ ವಹಿಸಿಕೊಳ್ಳಬೇಕುʼ ಎಂದು ಹೆಚ್‌ಡಿಕೆ ಕಿಡಿಕಾರಿದ್ದಾರೆ.

You cannot copy content of this page

Exit mobile version