Saturday, November 30, 2024

ಸತ್ಯ | ನ್ಯಾಯ |ಧರ್ಮ

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು: ಕರ್ತವ್ಯಲೋಪಕ್ಕೆ ಡ್ರಗ್ ಕಂಟ್ರೋಲರ್ ಸಸ್ಪೆಂಡ್: ಸಿ ಎಂ ಸಿದ್ದರಾಮಯ್ಯ

ಬೆಂಗಳೂರು ನ 30: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯಲೋಪಕ್ಕಾಗಿ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಇತ್ತೀಚೆಗೆ ಸಂಭವಿಸಿದ ಬಾಣಂತಿಯರ ಸಾವಿನ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಸಭೆಯ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು.

ರಿಂಗರ್‌ ಲ್ಯಾಕ್ಟೇಟ್‌ ದ್ರಾವಣ ಪೂರೈಸಿರುವ ಪಶ್ಚಿಮ ಬಂಗಾಳದ ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕಂಪೆನಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಆದೇಶಿಸಲಾಗಿದೆ ಎಂದರು.

ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸರ್ಕಾರದಿಂದ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಡ್ರಗ್ ಪೂರೈಸಿದ ಕಂಪೆನಿಯಿಂದಲೂ ಪರಿಹಾರವನ್ನು ವಸೂಲು ಮಾಡಿ, ಮೃತರ ಕುಟುಂಬಕ್ಕೆ ನೀಡಲು ಸೂಚನೆ ನೀಡಲಾಗಿದೆ ಎಂದರು.

ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿರುವ ಈ ರೀತಿಯ ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಅಭಿವೃದ್ಧಿ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲು ನಿರ್ಧರಿಸಲಾಗಿದೆ ಎಂದರು.

ತಮಿಳುನಾಡು ಮಾದರಿಯಲ್ಲಿ ಔಷಧಿಗಳ ಖರೀದಿ ಪ್ರಕ್ರಿಯೆ ಹಾಗೂ ಔಷಧ ನಿಯಂತ್ರಣ ಇಲಾಖೆಯನ್ನು ಪುನಾರಚನೆ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ ಎಂದರು.

ಮೆಡಿಸಿನ್ ಮಾಫಿಯಾ ನಿಯಂತ್ರಣಕ್ಕೆ ಅತ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಇದೆ ಎನ್ನುವ ಅಭಿಪ್ರಾಯಗಳು ಸಭೆಯಲ್ಲಿ ಹಲವರಿಂದ ವ್ಯಕ್ತವಾದವು. ಮೊದಲಿಗೆ ಈ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯುವುದು ಹಾಗೂ ತಮಿಳುನಾಡು ಮಾದರಿಯಲ್ಲಿ ಡ್ರಗ್ ನಿಯಂತ್ರಣಕ್ಕೆ ಹೊಸ ರೂಪು ರೇಷೆ, ನಿಯಮಾವಳಿ ರಚಿಸುವ ಬಗ್ಗೆ ಚರ್ಚಿಸಲಾಯಿತು.

ಈ ಬಗ್ಗೆ ಹಲವು ರೀತಿಯ ಗಂಭೀರ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸೂಚಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page