ಮೈಸೂರಿನ ಮುಡಾ ಪ್ರಕರಣದಲ್ಲಿ ಈವರೆಗೆ 100 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಕೇಂದ್ರ ಜಾರಿ ನಿರ್ದೇಶನಾಲಯ ವರದಿ ನೀಡಿದೆ. ತನ್ನ X ಖಾತೆಯಲ್ಲಿ ಹಂಚಿಕೊಂಡಂತೆ, ಈವರೆಗೆ 100 ಕೋಟಿ ರೂ ಮೌಲ್ಯದ 92 ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದೆ.
ಸದ್ಯ ಮುಡಾ ಕೇಸ್ನ ತನಿಖೆ ಪ್ರಗತಿಯಲ್ಲಿದೆ. ಕೇವಲ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ಪ್ರಕರಣ ಮಾತ್ರವಲ್ಲದೆ, ಮುಡಾ ಪ್ರಕರಣದಲ್ಲಿ ಹರಿದಾಡಿದ ನಗದು, ಬ್ಯಾಂಕ್ ವರ್ಗಾವಣೆ, ಚರ, ಸ್ಥಿರ ಆಸ್ತಿಗಳ ರೂಪದಲ್ಲಿ ಅಕ್ರಮ ಹಂಚಿಕೆ ಮಾಡಲು ಲಂಚ ಪಡೆದಿರುವುದಕ್ಕೆ ಸಂಬಂಧಿಸಿದ ಪುರಾವೆಗಳನ್ನು ತನಿಖೆಯ ಸಮಯದಲ್ಲಿ ಸಂಗ್ರಹಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಜಾರಿ ನಿರ್ದೇಶನಾಲಯ, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ, 2002 ರ ನಿಬಂಧನೆಗಳ ಅಡಿಯಲ್ಲಿ 100 ಕೋಟಿ ರೂ. ಮೌಲ್ಯದ 92 ಸ್ಥಿರ ಆಸ್ತಿಗಳನ್ನು (ಮುಡಾ ಸೈಟ್‌ಗಳು) ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಲಾಗಿದೆ. ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳನ್ನು ವಸತಿ ಸಹಕಾರಿ ಸಂಘ ಮತ್ತು ಮುಡಾ ಅಧಿಕಾರಿಗಳು ಸೇರಿದಂತೆ ಪ್ರಭಾವಿ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಇಡಿ ತಿಳಿಸಿದೆ.
ಈ ಹಿಂದೆ 300 ಕೋಟಿ ಮೌಲ್ಯದ 160 ಆಸ್ತಿ ಮುಟ್ಟುಗೋಲು ಹಾಕಿದ್ದ ಇಡಿ, ಇದೀಗ ಮತ್ತೆ 100 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದೆ. ಒಟ್ಟು 400 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ