ಇಡೀ ದೇಶದ ಕುತೂಹಲ ಕೆರಳಿಸಿದ್ದ ಬಿಹಾರ ವಿಧಾನಸಭಾ ಚುನಾವಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್, ಬಿಹಾರ ವಿಧಾನಸಭೆಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ನವೆಂಬರ್ 6ರಂದು ಬಿಹಾರದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 11ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 14ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದರು.
ಚುನಾವಣೆಯ ವಿವರಗಳನ್ನು ತಿಳಿಸಿದ ಮುಖ್ಯ ಚುನಾವಣಾ ಆಯುಕ್ತ, ಬಿಹಾರದ 243 ವಿಧಾನಸಭಾ ಸ್ಥಾನಗಳಿಗೆ ಒಟ್ಟು ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತದ ಮತದಾನ ನವೆಂಬರ್ 6ರಂದು ನಡೆದರೆ, ಎರಡನೇ ಹಂತದ ಮತದಾನ 11ರಂದು ನಡೆಯಲಿದೆ. ನವೆಂಬರ್ 14ರಂದು ಫಲಿತಾಂಶ ನಡೆಯಲಿದೆ ಎಂದು ಹೇಳಿದರು.
‘ಬಿಹಾರದಲ್ಲಿ ಈ ಬಾರಿ ಒಟ್ಟು 14 ಲಕ್ಷ ಮಂದಿ ಮೊದಲ ಬಾರಿಗೆ ಮತ ಚಲಾವಣೆ ಮಾಡುವ ಮತದಾರರಿದ್ದಾರೆ. ನಿಮ್ಮ ಮತದಾರರ ಪಟ್ಟಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳನ್ನು ನೀವು 1950 ಗೆ ಕರೆ ಮಾಡುವ ಮೂಲಕ ವರದಿ ಮಾಡಬಹುದು ಎಂದು ಜ್ಞಾನೇಶ್ ಕುಮಾರ್ ಹೇಳಿದರು.
ವಿವಾದಕ್ಕೆ ಕಾರಣವಾಗಿದ್ದ ಎಸ್‌ಐಆರ್ ಬಗೆಗಿನ ಪ್ರಶ್ನೆಗೆ ಉತ್ತರಿಸಿದ ಜ್ಞಾನೇಶ್ ಕುಮಾರ್, ‘ಎಸ್‌ಐಆರ್ ನಂತರದ ಅಂತಿಮ ಮತದಾರರ ಪಟ್ಟಿಯನ್ನು ಎಲ್ಲಾ ರಾಜಕೀಯ ಪಕ್ಷಗಳಿಗೆ ನೀಡಲಾಗಿದೆ. ನಾಮಪತ್ರ ಸಲ್ಲಿಕೆ ದಿನಾಂಕದ ನಂತರ ಬಿಡುಗಡೆಯಾಗುವ ಮತದಾರರ ಪಟ್ಟಿಯೇ ಅಂತಿಮವಾಗಿರುತ್ತದೆ’ ಎಂದು ಹೇಳಿದರು.