Friday, June 14, 2024

ಸತ್ಯ | ನ್ಯಾಯ |ಧರ್ಮ

ರಾಜ್ಯದಲ್ಲಿ ವಿದ್ಯುತ್‌ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಹೆಚ್‌.ಡಿ.ಕೆ ಗರಂ

ಬೆಂಗಳೂರು: ರಾಜ್ಯದಲ್ಲಿ ವಿದ್ಯತ್‌ ಬೆಲೆ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವ ಕುರಿತು ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ  ಹೆಚ್‌.ಡಿ. ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಬಿಜೆಪಿ ಸರ್ಕಾರ ವಿದ್ಯುತ್‌ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್‌ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ ಎಂದು ಹೆಚ್‌.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ .

ವಿಧಾನಮಂಡಲ ಅಧಿವೇಶನ ಮುಂದೂಡಿಕೆಯಾದ ಕೂಡಲೇ ವಿದ್ಯುತ್‌ ದರ ಏರಿಕೆ ಆಗಿದೆ! ಏನೀ ಹುನ್ನಾರ?ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರಕಾರ, ಕರೆಂಟ್‌ ಶಾಕ್ ಕೊಟ್ಟು ಜನರು ಕಂಗೆಡುವಂತೆ ಮಾಡಿದೆ.‌ ಪ್ರತಿ ಯೂನಿಟ್‌ʼಗೆ 24ರಿಂದ 43 ಪೈಸೆ ಹೆಚ್ಚಿಸಿರುವುದು ಅವೈಜ್ಞಾನಿಕ, ಅನಪೇಕ್ಷಿತ & ಖಂಡನೀಯ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿವೆ. ವಿದ್ಯುತ್‌ ಉತ್ಪಾದನೆ ಉತ್ತಮವಾಗಿದೆ. ಆದರೂ ಖರೀದಿ ವೆಚ್ಚದಲ್ಲಿ 1,244 ಕೋಟಿ ರೂ. ಹೆಚ್ಚಳ ಆಗಿದೆ ಎನ್ನುವ ಲೆಕ್ಕವನ್ನು ನಂಬುವ ರೀತಿಯಲ್ಲಿ ಇಲ್ಲ. ಇಂಧನ ವಲಯದ ಕೆಲ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ಎಸ್ಕಾಂಗಳ ಭುಜದ ಮೇಲೆ ಗುಂಡಿಟ್ಟು, ಜನರಿಗೆ ಹೊಡೆಯುವ ಕೆಲಸ ಆಗುತ್ತಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ಜನರ ಪರ ಇಲ್ಲ ಎನ್ನುವುದು ಸತ್ಯ. ಜಾಗತಿಕ ಪೇಟೆಯಲ್ಲಿ ಕಚ್ಛಾತೈಲದ ಬೆಲೆ ನಿರಂತರ ಇಳಿದರೂ ದೇಶದಲ್ಲಿ ತೈಲಬೆಲೆ ಇಳಿಸದ ಕೇಂದ್ರದ ಬಜೆಪಿ ಸರ್ಕಾರದ ಹಾದಿಯಲ್ಲೇ ರಾಜ್ಯ ಬಿಜೆಪಿ ಸರಕಾರವೂ ಸಾಗಿದೆ. ಹೀಗಾಗಿ ವಿದ್ಯುತ್‌ ದರದ ನಿರಂತರ ಏರಿಕೆ ಬಗ್ಗೆ ಗಂಭೀರ ಅನುಮಾನಗಳಿವೆ ಎಂದು ಕುಮಾರಸ್ವಾಮಿ ಅವರು ದೂರಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು