Home ಬೆಂಗಳೂರು ಮಾನ್ಯ ಹತ್ಯೆ ಪ್ರಕರಣ: ತ್ವರಿತಗತಿ ನ್ಯಾಯಾಲಯ ಸ್ಥಾಪನೆ ಹಾಗೂ ಮರ್ಯಾದಾಗೇಡು ಹತ್ಯೆ ತಡೆಗೆ ವಿಶೇಷ ಕಾನೂನು...

ಮಾನ್ಯ ಹತ್ಯೆ ಪ್ರಕರಣ: ತ್ವರಿತಗತಿ ನ್ಯಾಯಾಲಯ ಸ್ಥಾಪನೆ ಹಾಗೂ ಮರ್ಯಾದಾಗೇಡು ಹತ್ಯೆ ತಡೆಗೆ ವಿಶೇಷ ಕಾನೂನು – ಸಿಎಂ ಸಿದ್ದರಾಮಯ್ಯ ಘೋಷಣೆ

0

ಬೆಂಗಳೂರು: ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರದ ಯುವತಿ ಮಾನ್ಯ ಅವರ ಮರ್ಯಾದಾಗೇಡು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ಸಂತ್ರಸ್ತ ಕುಟುಂಬಕ್ಕೆ ಶೀಘ್ರ ನ್ಯಾಯ ದೊರಕಿಸಿಕೊಡುವುದು ಸರ್ಕಾರದ ಆದ್ಯತೆಯಾಗಿದ್ದು, ಇದಕ್ಕಾಗಿ ತ್ವರಿತಗತಿ ನ್ಯಾಯಾಲಯ (Fast Track Court) ರಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈ ಪ್ರಕರಣವು ದಲಿತರ ಮೇಲಿನ ದೌರ್ಜನ್ಯ ಮತ್ತು ಕೊಲೆಯ ಹಿನ್ನೆಲೆ ಹೊಂದಿರುವುದರಿಂದ, ಅಟ್ರಾಸಿಟಿ ಕಾಯ್ದೆಯಡಿ 60 ದಿನಗಳ ಒಳಗೆ ದೋಷಾರೋಪ ಪಟ್ಟಿ (Charge Sheet) ಸಲ್ಲಿಸುವುದು ಕಡ್ಡಾಯವಾಗಿದೆ. ತನಿಖೆ ಮತ್ತು ಕಾನೂನು ಪ್ರಕ್ರಿಯೆಗಳನ್ನು ಬಲಪಡಿಸಲು ವಿಶೇಷ ಸರ್ಕಾರಿ ಅಭಿಯೋಜಕರನ್ನು (Special Public Prosecutor) ನೇಮಕ ಮಾಡಲು ಸರ್ಕಾರ ನಿರ್ಧರಿಸಿದೆ.

ಜಾತಿಯಾಧಾರಿತ ಹಿಂಸೆ, ಮರ್ಯಾದಾಗೇಡು ಹತ್ಯೆ ಮತ್ತು ಮಹಿಳೆಯರ ಇಚ್ಛೆಗೆ ವಿರುದ್ಧವಾಗಿ ಮದುವೆಗೆ ಬಲವಂತಪಡಿಸುವಂತಹ ಕೃತ್ಯಗಳು ಸಮಾಜ ತಲೆತಗ್ಗಿಸುವಂತಹ ಹೀನ ಕೆಲಸಗಳಾಗಿವೆ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಘಟನೆಗಳನ್ನು ಸರ್ಕಾರವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಮತ್ತು ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಮತ್ತು ಜನರಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸಲು ರಾಜ್ಯದಲ್ಲಿ ‘ವಿಶೇಷ ಕಾನೂನು’ ರಚನೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ವಿಷಯವನ್ನು ಮುಂಬರುವ ವಿಧಾನ ಮಂಡಲದ ಅಧಿವೇಶನದಲ್ಲಿ ಚರ್ಚಿಸಿ, ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

You cannot copy content of this page

Exit mobile version