Friday, January 2, 2026

ಸತ್ಯ | ನ್ಯಾಯ |ಧರ್ಮ

ಇವಿಎಮ್‌ ಕುರಿತು ವಿಶ್ವಾಸವಿದೆಯೆಂದ 83.61ರಷ್ಟು ಮತದಾರರು: ಸಮೀಕ್ಷೆಯನ್ನು ತಿರಸ್ಕರಿಸಿದ ಪ್ರಿಯಾಂಕ್‌ ಖರ್ಗೆ

ಕರ್ನಾಟಕದಲ್ಲಿ ವಿದ್ಯುನ್ಮಾನ ಮತಯಂತ್ರಗಳ (EVM) ಕುರಿತು ಇತ್ತೀಚೆಗೆ ಬಿಡುಗಡೆಯಾದ ಸಮೀಕ್ಷಾ ವರದಿಯ ಕುರಿತು ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಮೀಕ್ಷೆಗೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರವು 2024ರ ಲೋಕಸಭೆ ಚುನಾವಣೆಯ ಕುರಿತು ನಡೆಸಿದ ಸಮೀಕ್ಷೆಯಲ್ಲಿ ಶೇ. 83.61ರಷ್ಟು ಮಂದಿ ಇವಿಎಂಗಳ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿತ್ತು. ಈ ವರದಿಯನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸುತ್ತಿರುವ ಬೆನ್ನಲ್ಲೇ ಸಚಿವರು ಈ ಸಮೀಕ್ಷೆಯ ವಿಶ್ವಾಸಾರ್ಹತೆಯನ್ನೇ ಪ್ರಶ್ನಿಸಿದ್ದಾರೆ.

ಈ ಸಮೀಕ್ಷೆಯನ್ನು ರಾಜ್ಯ ಸರ್ಕಾರ ಅನುಮೋದಿಸಿಲ್ಲ ಅಥವಾ ನಡೆಸಲು ಆದೇಶಿಸಿಲ್ಲ ಎಂದು ಹೇಳಿರುವ ಖರ್ಗೆ ಅವರು, ಇದು ಕೇಂದ್ರ ಚುನಾವಣಾ ಆಯೋಗದ ಸೂಚನೆಯಂತೆ ರಾಜ್ಯ ಚುನಾವಣಾ ಆಯೋಗವು ಒಂದು ಎನ್‌ಜಿಒ ಮೂಲಕ ನಡೆಸಿದ ಸಮೀಕ್ಷೆಯಾಗಿದೆ ಎಂದು ವಿವರಿಸಿದ್ದಾರೆ.

ಈ ಸಮೀಕ್ಷೆ ನಡೆಸಿದ ಎನ್‌ಜಿಒ ಸಂಸ್ಥೆಯ ಮುಖ್ಯಸ್ಥರು ಪ್ರಧಾನಿ ಕಚೇರಿಗೆ ಅತ್ಯಂತ ಆಪ್ತರಾಗಿದ್ದು, ಪ್ರಧಾನಿಗಳ ಕುರಿತು ಪುಸ್ತಕವನ್ನೂ ಬರೆದಿದ್ದಾರೆ. ಹೀಗಾಗಿ ಈ ವರದಿಯ ಹಿಂದೆ ರಾಜಕೀಯ ಉದ್ದೇಶವಿದೆ ಎಂದು ಅವರು ಆರೋಪಿಸಿದ್ದಾರೆ. ಅಲ್ಲದೆ, ರಾಜ್ಯದ 100ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳ ಪೈಕಿ ಕೇವಲ 5,000 ಜನರ ಅಭಿಪ್ರಾಯ ಸಂಗ್ರಹಿಸಿ ಇಡೀ ರಾಜ್ಯದ ಜನರ ಅಭಿಪ್ರಾಯವೆಂದು ಬಿಂಬಿಸುವುದು ತಾಂತ್ರಿಕವಾಗಿ ಸರಿಯಲ್ಲ ಎಂದು ಅವರು ವಾದಿಸಿದ್ದಾರೆ.

ಇದೇ ಸಂದರ್ಭದಲ್ಲಿ ಪ್ರಿಯಾಂಕ್ ಖರ್ಗೆ ಅವರು ೨೦೨೩ರ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ನಡೆದಿದೆ ಎನ್ನಲಾದ ಮತದಾರರ ಪಟ್ಟಿ ಅಕ್ರಮದ ವಿಷಯವನ್ನು ಮತ್ತೆ ಮುನ್ನೆಲೆಗೆ ತಂದಿದ್ದಾರೆ. ಕಲಬುರಗಿ ಜಿಲ್ಲೆಯ ಅಲಂದ್ ಕ್ಷೇತ್ರದಲ್ಲಿ ಸುಮಾರು 6,000ಕ್ಕೂ ಹೆಚ್ಚು ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಲು ಯತ್ನಿಸಲಾಗಿತ್ತು ಎಂದು ಅವರು ದೂರಿದ್ದಾರೆ.

ಈ ಹಗರಣದ ತನಿಖೆ ನಡೆಸುತ್ತಿರುವ ಪೊಲೀಸರು, ಪ್ರತಿ ಮತದಾರನ ಹೆಸರನ್ನು ಪಟ್ಟಿಯಿಂದ ಕೈಬಿಡಲು ಡೇಟಾ ಎಂಟ್ರಿ ತಂಡವೊಂದಕ್ಕೆ ತಲಾ ೮೦ ರೂಪಾಯಿಯಂತೆ ಲಕ್ಷಾಂತರ ರೂಪಾಯಿ ಹಣ ಪಾವತಿಸಿರುವುದನ್ನು ಪತ್ತೆಹಚ್ಚಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಚುನಾವಣಾ ಆಯೋಗ ಮತ್ತು ಬಿಜೆಪಿ ಸೇರಿ ವ್ಯವಸ್ಥಿತವಾಗಿ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕುವ ಮೂಲಕ ‘ವೋಟ್ ಚೋರಿ’ ಮಾಡುತ್ತಿವೆ ಎಂದು ರಾಹುಲ್ ಗಾಂಧಿ ಅವರು ಮಾಡಿದ್ದ ಆರೋಪಕ್ಕೆ ಈ ತನಿಖೆಯು ಪುಷ್ಟಿ ನೀಡುತ್ತಿದೆ ಎಂದು ಅವರು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page