ಚಿತ್ರರಂಗದ ಖ್ಯಾತ ನಟ ಹಾಗೂ ಕಿರುತೆರೆ ಕಲಾವಿದ ದಿಲೀಪ್ ರಾಜ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯರಾಗಿದ್ದ ಅವರು ಅಕಾಲಿಕವಾಗಿ ಅಗಲಿರುವ ಸುದ್ದಿ ಅಭಿಮಾನಿಗಳು ಹಾಗೂ ಚಿತ್ರರಂಗದವರಲ್ಲಿ ಆಘಾತ ಮೂಡಿಸಿದೆ.
ಮನೆಯಲ್ಲಿದ್ದ ವೇಳೆ ದಿಲೀಪ್ ರಾಜ್ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದೆ ಎನ್ನಲಾಗಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
2005ರಲ್ಲಿ ಬಿಡುಗಡೆಯಾದ ‘ಬಾಯ್ ಫ್ರೆಂಡ್’ ಚಿತ್ರದ ಮೂಲಕ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ದಿಲೀಪ್ ರಾಜ್, ಬಳಿಕ ಹಲವು ಸಿನಿಮಾಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ವಿಶೇಷವಾಗಿ ಪುನೀತ್ ರಾಜ್‌ಕುಮಾರ್ ಅಭಿನಯದ ಮಿಲನ ಚಿತ್ರದಲ್ಲಿ ಅಭಿನಯಿಸುವ ಮೂಲಕ ಅವರು ಹೆಚ್ಚು ಜನಪ್ರಿಯತೆ ಪಡೆದಿದ್ದರು.
ಇದರ ಜೊತೆಗೆ ಯು ಟರ್ನ್, ‘ಆರ್ಕೆಸ್ಟ್ರಾ ಮೈಸೂರು’, ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಸೇರಿದಂತೆ ಹಲವು ಚಿತ್ರಗಳಲ್ಲಿ ಅವರು ಗಮನಾರ್ಹ ಪಾತ್ರಗಳಲ್ಲಿ ನಟಿಸಿದ್ದರು. ಸಿನಿಮಾ ಮಾತ್ರವಲ್ಲದೆ ಕಿರುತೆರೆಯಲ್ಲೂ ಸಕ್ರಿಯರಾಗಿದ್ದ ಅವರು ಹಿಟ್ಲರ್ ಕಲ್ಯಾಣ ಧಾರಾವಾಹಿಯಲ್ಲಿ ಅಭಿನಯಿಸಿದ್ದರು. ಅಲ್ಲದೆ ‘ಪಾರು’ ಮತ್ತು ‘ನಾ ನಿನ್ನ ಬಿಡಲಾರೆ’ ಧಾರಾವಾಹಿಗಳ ನಿರ್ಮಾಪಕರಾಗಿಯೂ ಗುರುತಿಸಿಕೊಂಡಿದ್ದರು.
ನಟನೆಯ ಜೊತೆಗೆ ಡಬ್ಬಿಂಗ್ ಕಲಾವಿದನಾಗಿಯೂ ದಿಲೀಪ್ ರಾಜ್ ತಮ್ಮ ಪ್ರತಿಭೆ ಮೆರೆದಿದ್ದರು. ಅವರ ಸರಳ ವ್ಯಕ್ತಿತ್ವ ಮತ್ತು ಅಭಿನಯ ಶೈಲಿ ಅಭಿಮಾನಿಗಳ ಮನಸ್ಸಿನಲ್ಲಿ ವಿಶೇಷ ಸ್ಥಾನ ಪಡೆದಿತ್ತು.
ದಿಲೀಪ್ ರಾಜ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಚಿತ್ರರಂಗದ ಗಣ್ಯರು, ಸಹ ಕಲಾವಿದರು ಹಾಗೂ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಸಂತಾಪ ಸೂಚಿಸುತ್ತಿದ್ದಾರೆ. ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.
