ಕೊಪ್ಪಳದಲ್ಲಿ ಬಲ್ಡೋಟಾ ಗ್ರೂಪ್ ಸಂಸ್ಥೆಗೆ ಸೇರಿದ ಕಾರ್ಖಾನೆಯ ವಿಸ್ತರಣೆ ವಿರೋಧಿಸಿ ರೈತರು ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಭಾರೀ ಪ್ರತಿಭಟನೆ ನಡೆದಿದೆ. ಕಾರ್ಖಾನೆಯಿಂದ ಹೊರಬರುವ ಹೊಗೆ ಮತ್ತು ಧೂಳಿನಿಂದಾಗಿ ಬೆಳೆಗಳು ಹಾಳಾಗುತ್ತಿದ್ದು, ಮನೆಗಳಲ್ಲಿ ಮಕ್ಕಳು ಹಾಗೂ ವೃದ್ಧರು ಅನಾರೋಗ್ಯಕ್ಕೀಡಾಗುತ್ತಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ನಗರದ ಗವಿಮಠದ ಆವರಣದಿಂದ ಆರಂಭವಾದ ಮೆರವಣಿಗೆ ಪ್ರಮುಖ ರಸ್ತೆಗಳಲ್ಲಿ ಸಾಗಿ ಪ್ರತಿಭಟನಾ ಸಭೆಯಾಗಿ ಮಾರ್ಪಟ್ಟಿತು. ಹಾಲಿವರ್ತಿ ಭಾಗದ ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಕಡಲೆ, ಮೆಕ್ಕೆಜೋಳ, ಜೋಳ ಸೇರಿದಂತೆ ವಿವಿಧ ಬೆಳೆಗಳು ಹೊಗೆಯಿಂದ ಹಾನಿಗೊಳಗಾಗಿರುವುದನ್ನು ತೋರಿಸಲು ಹಾಳಾದ ಬೆಳೆಗಳನ್ನು ಎತ್ತಿನ ಬಂಡಿಗಳಲ್ಲಿ ಹೊತ್ತು ತಂದು ಗಮನ ಸೆಳೆದರು. ಕಳೆದ ಒಂದು ವರ್ಷದಿಂದ ಸಮಸ್ಯೆ ಮುಂದುವರಿದಿದ್ದರೂ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ಅವರು ದೂರಿದರು.
ಖಾಲಿ ತೊಟ್ಟಿಲು ಪ್ರದರ್ಶಿಸಿ ಮಹಿಳೆಯರ ಆಕ್ರೋಶ
ಪ್ರತಿಭಟನೆಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಗಮನ ಸೆಳೆದಿತು. ತೊಟ್ಟಿಲುಗಳೊಂದಿಗೆ ಬಂದ ಮಹಿಳೆಯರು, “ಕಾರ್ಖಾನೆಗಳಿಂದ ಹೊರಬರುವ ಹೊಗೆಯಿಂದ ಆರೋಗ್ಯ ಹದಗೆಟ್ಟಿದ್ದು, ಗರ್ಭಪಾತ ಮತ್ತು ಬಂಜೆತನದ ಸಮಸ್ಯೆ ಎದುರಾಗುತ್ತಿದೆ. ಮಾನಸಿಕ ಹಿಂಸೆ ಅನುಭವಿಸುತ್ತಿದ್ದೇವೆ” ಎಂದು ಖಾಲಿ ತೊಟ್ಟಿಲು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.
ಹಿರೇಬಗನಾಳ ಗ್ರಾಮದ ರೈತ ಮಂಜುನಾಥ್ ಆಕ್ಸಿಜನ್ ಮಾಸ್ಕ್ ಧರಿಸಿ ಹೋರಾಟದಲ್ಲಿ ಭಾಗವಹಿಸಿದ್ದು, “ಕಾರ್ಖಾನೆ ಹೊಗೆಯಿಂದ ಉಸಿರಾಡಲು ಆಗುತ್ತಿಲ್ಲ” ಎಂದು ದೂರು ನೀಡಿದರು. ಟ್ರ್ಯಾಕ್ಟರ್‌ಗಳಲ್ಲಿ ಆಗಮಿಸಿದ ರೈತರು ನಗರದ ಬಸವೇಶ್ವರ ವೃತ್ತದಲ್ಲಿ ಸರ್ಕಾರದ ಪ್ರತಿಕಾತ್ಮಕ ಶವಯಾತ್ರೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ವೃದ್ಧರೂ ಪಾಲ್ಗೊಂಡು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಜನಪ್ರತಿನಿಧಿಗಳ ವಿರುದ್ಧ ಪ್ರಶ್ನೆಗಳ ಮಳೆ
ಪ್ರತಿಭಟನೆಯಲ್ಲಿ ಭಾಗಿಯಾದ ಕೊಪ್ಪಳ ಕ್ಷೇತ್ರದ ಕಾಂಗ್ರೆಸ್ ಸಂಸದ ರಾಜಶೇಖರ ಹಿಟ್ನಾಳ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ ಅವರನ್ನು ರೈತರು ತರಾಟೆಗೆ ತೆಗೆದುಕೊಂಡರು. “ಕಾರ್ಖಾನೆ ವಿಸ್ತರಣೆ ವೇಳೆ ಮೌನವಾಗಿದ್ದು, ಈಗ ಪ್ರತಿಭಟನೆಗೆ ಏಕೆ ಬಂದಿದ್ದೀರಿ?” ಎಂದು ಜನಪ್ರತಿನಿಧಿಗಳನ್ನು ಪ್ರಶ್ನಿಸಿದರು.
ರೈತರ ಬೇಡಿಕೆಗಳಿಗೆ ಸ್ಪಂದಿಸಿ ತಕ್ಷಣ ಪರಿಸರ ಅಧ್ಯಯನ ನಡೆಸಬೇಕು, ಹಾನಿಗೊಳಗಾದ ಬೆಳೆಗಳಿಗೆ ಪರಿಹಾರ ನೀಡಬೇಕು ಹಾಗೂ ಕಾರ್ಖಾನೆ ವಿಸ್ತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
