ಯಾದಗಿರಿ ಬಳಿ ಭೀಕರ ರಸ್ತೆ ಅಪಘಾತ: ಕಾರು–ಬಸ್ ಡಿಕ್ಕಿ, 6 ಮಂದಿ ಸಜೀವ ದಹನ

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಸಮೀಪ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಆರು ಮಂದಿ ಸಜೀವ ದಹನಗೊಂಡಿರುವ ದಾರುಣ ಘಟನೆ ನಡೆದಿದೆ. ಕಾರು ಮತ್ತು ಖಾಸಗಿ ಏಸಿ ಬಸ್ ನಡುವಿನ ಮುಖಾಮುಖಿ ಡಿಕ್ಕಿಯಿಂದ ಈ ಅವಘಡ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಬೆಂಕಿಗಾಹುತಿಯಾಗಿವೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಬೆಂಗಳೂರಿನಿಂದ ಕಲಬುರಗಿಯತ್ತ ಸಾಗುತ್ತಿದ್ದ ಖಾಸಗಿ ಬಸ್ ಹಾಗೂ ಯಾದಗಿರಿಯಿಂದ ರಾಯಚೂರಿನ ಲಿಂಗಸೂಗೂರು ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಪ್ರಯಾಣಿಕರು ಹೊರಬರಲು ಸಾಧ್ಯವಾಗದೆ ಬೆಂಕಿಯಲ್ಲಿ ಸಿಲುಕಿಕೊಂಡು ಸಜೀವ ದಹನಗೊಂಡಿದ್ದಾರೆ. ಕಾರು ಸಂಪೂರ್ಣವಾಗಿ ಕರಕಲಾಗಿದ್ದು, ಅದರಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಭಸ್ಮವಾಗಿದ್ದಾರೆ.

ಅಪಘಾತದ ಭೀಕರತೆ ಎಷ್ಟಿದೆ ಎಂದರೆ, ಮೃತರ ದೇಹಗಳು ಸಂಪೂರ್ಣವಾಗಿ ಸುಟ್ಟು ಹೋಗಿದ್ದು ಗುರುತಿಸುವುದೇ ಸವಾಲಾಗಿರುವ ಸ್ಥಿತಿ ನಿರ್ಮಾಣವಾಗಿದೆ ಎಂದು ಮೂಲಗಳು ತಿಳಿಸಿವೆ. ಬಸ್‌ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅಪಘಾತದ ಪರಿಣಾಮ ಬಸ್‌ಗೂ ಬೆಂಕಿ ತಗುಲಿದ್ದು ಕೆಲವರಿಗೆ ಗಂಭೀರ ಗಾಯಗಳಾಗಿವೆ.

ಘಟನೆ ತಿಳಿದು ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯಕ್ಕೆ ಮುಂದಾದರೂ, ಕಾರಿನ ಡೋರ್‌ಗಳು ತೆರೆಯದ ಕಾರಣ ಒಳಗಿದ್ದವರನ್ನು ಉಳಿಸಲು ಸಾಧ್ಯವಾಗಲಿಲ್ಲ. ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿಕೊಂಡು ಪರಿಸ್ಥಿತಿ ಭೀಕರ ರೂಪ ಪಡೆದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟರು.

ಮಾಹಿತಿ ತಿಳಿದು ಸುರಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮೃತರ ಗುರುತು ಪತ್ತೆ ಹಾಗೂ ಅಪಘಾತದ ನಿಖರ ಕಾರಣ ಕುರಿತು ತನಿಖೆ ಆರಂಭಿಸಲಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

Related Articles

ಇತ್ತೀಚಿನ ಸುದ್ದಿಗಳು