ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರುಗಳ ವಿರುದ್ಧ ವಿವಿಧ ಕಾರಣಗಳಿಗಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಆರ್.ಆರ್. ನಗರದಲ್ಲಿ ಅಪಾರ್ಟ್ಮೆಂಟ್ ಮಾಲೀಕರನ್ನು ಉದ್ದೇಶಿಸಿ ಮಾತನಾಡುವಾಗ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ ಆರೋಪದ ಮೇಲೆ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೆ, ಚುನಾವಣೆಗೆ ಸಂಬಂಧಿಸಿದಂತೆ ಸುಳ್ಳು ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಏತನ್ಮಧ್ಯೆ, ಕರ್ನಾಟಕ ಬಿಜೆಪಿಯ ಅಧಿಕೃತ ಎಕ್ಸ್ (ಟ್ವಿಟರ್) ಹ್ಯಾಂಡಲ್ ಬಳಸಿ ಕಾಂಗ್ರೆಸ್ ವಿರುದ್ಧ ಅವಹೇಳನಕಾರಿ ಪೋಸ್ಟುಗಳನ್ನು ಹಾಕಿದ ಆರೋಪವನ್ನು ವಿಜಯೇಂದ್ರ ಅವರ ಮೇಲೆ ಹೊರಿಸಲಾಗಿದೆ.