ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯತ್ ಚಾಲಕ ಬಾಬು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಂಸದ ಸುಧಾಕರ್ ಮತ್ತು ಅವರ ಬೆಂಬಲಿಗರ ಹೆಸರನ್ನು ಬರೆದಿಟ್ಟು ಬಾಬು ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದರು.
ಮೃತ ಬಾಬು ಅವರ ಪತ್ನಿ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಸದ ಡಾ.ಕೆ.ಸುಧಾಕರ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಅಟ್ರಾಸಿಟಿ ಕೇಸ್ ಕೂಡ ದಾಖಲಿಸಲಾಗಿದೆ.
ಎಫ್‌ಐಆರ್‌ನಲ್ಲಿ ಸಂಸದ ಡಾ.ಕೆ.ಸುಧಾಕರ್ ಅವರನ್ನು ಎ1 (ಪ್ರಥಮ ಆರೋಪಿ) ಎಂದು ಉಲ್ಲೇಖಿಸಲಾಗಿದೆ. ಅಲ್ಲದೆ, ನಾಗೇಶ್ ಮತ್ತು ಮಂಜುನಾಥ್ ಎಂಬವರ ಹೆಸರನ್ನು ಕೂಡ ಎಫ್‌ಐಆರ್‌ನಲ್ಲಿ ನಮೂದಿಸಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್‌ನಲ್ಲಿ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ಬಾಬು ಎಂಬುವವರು ಆತ್ಮಹತ್ಯೆಗೆ ಶರಣಾಗಿದ್ದು, ಈ ಪ್ರಕರಣವು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಅವರ ಆತ್ಮಹತ್ಯೆಗೆ ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಮತ್ತು ಅವರ ಬೆಂಬಲಿಗರೇ ಕಾರಣ ಎಂದು ಆರೋಪಿಸಲಾಗಿದೆ.
ಬಾಬು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಡೆತ್ ನೋಟ್ ಬರೆದಿದ್ದು, ಅದರಲ್ಲಿ ಸಂಸದ ಡಾ. ಕೆ. ಸುಧಾಕರ್ ಮತ್ತು ಅವರ ಕೆಲವು ಬೆಂಬಲಿಗರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ. ಈ ಡೆತ್ ನೋಟ್‌ನಲ್ಲಿ, ಬಾಬು ತಮ್ಮ ಸಾವಿಗೆ ನೇರವಾಗಿ ಸುಧಾಕರ್ ಮತ್ತು ಅವರ ಬೆಂಬಲಿಗರ ಕಿರುಕುಳವೇ ಕಾರಣ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ. ಈ ಡೆತ್ ನೋಟ್ ಪ್ರಕರಣದ ತನಿಖೆಯಲ್ಲಿ ಪ್ರಮುಖ ಸಾಕ್ಷ್ಯವಾಗಿ ಪರಿಗಣಿಸಲ್ಪಟ್ಟಿದೆ.