ಹಲ್ದ್ವಾನಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಾರ್ಯಕ್ರಮ ನಡೆದ ಸ್ಥಳದಲ್ಲಿ ಆಯೋಜಿಸಲಾಗಿದ್ದ ಧಾರ್ಮಿಕ ವಿಧಿಗೆ ಜಾತಿ ಬಣ್ಣ ಬಳಿದಿದ್ದಾರೆ ಎಂದು ಆರೋಪಿಸಿ ವಾಲ್ಮೀಕಿ ಸಮುದಾಯದ ಮುಖಂಡರೊಬ್ಬರು ನೀಡಿದ ದೂರಿನ ಮೇರೆಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ವಿವಿಧ ಗುಂಪುಗಳ ನಡುವೆ ದ್ವೇಷ ಪ್ರಚೋದನೆ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಆರೋಪಕ್ಕೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆಯ (BNS) ಹಲವು ಸೆಕ್ಷನ್‌ಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ-1989 ರ ಅಡಿಯಲ್ಲಿ ಈ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜವಾಹರ್ ನಗರದ ನಿವಾಸಿ ಹಾಗೂ ಶ್ರೀರಾಮ್ ಸೇನಾ ಧರ್ಮಾರ್ಥ ಸೇವಾ ನ್ಯಾಸ್‌ನ ಸದಸ್ಯ ಅಮಿತ್ ಕುಮಾರ್ ಅವರು ಹಲ್ದ್ವಾನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೈದಾನದಲ್ಲಿ ನಡೆದ “ಧಾರ್ಮಿಕ ಪೂಜೆ ಹಾಗೂ ಸ್ವಚ್ಛತಾ ಅಭಿಯಾನ”ದ ವೇಳೆ ತಾವೂ ಸ್ಥಳದಲ್ಲಿದ್ದುದಾಗಿ ಹೇಳಿರುವ ಅವರು, ಆಗಸ್ಟ್ 29 ರಂದು ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಅವರು ನೀಡಿದ ಹೇಳಿಕೆಯು ತಮ್ಮ ಸಮುದಾಯದ ಭಾವನೆಗಳಿಗೆ ತೀವ್ರ ಧಕ್ಕೆ ತಂದಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
