ಬೆಂಗಳೂರು: ರಾಜ್ಯಪಾಲರು ಬಿಜೆಪಿ ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದು, ಇವರನ್ನು ರಾಷ್ಟ್ರಪತಿಗಳು ತಕ್ಷಣವೇ ವಜಾ ಮಾಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ರಾಜಕೀಯ ಪ್ರೇರಿತವಾಗಿ ಮಾಡಿರುವ ಆರೋಪವನ್ನೇ ಆಧಾರವಾಗಿಟ್ಟುಕೊಂಡು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸರಿಯಲ್ಲ. ಇವರು ಬಿಜೆಪಿಯಿಂದ ನೇಮಕವಾಗಿರಬಹುದು ಆದರೆ, ಆ ಪಕ್ಷದ ಏಜೆಂಟ್ ಅಲ್ಲ ಎನ್ನುವುದು ನೆನಪಿನಲ್ಲಿಟ್ಟುಕೊಳ್ಳಬೇಕಿದೆ.
ರಾಜ್ಯದ ಜನರ ಆಡಳಿತ ನೀಡುತ್ತಾ, ಸಾಮಾಜಿಕ ನ್ಯಾಯಕ್ಕೆ ಶ್ರಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪ್ರಿಯತೆಯನ್ನು ಕುಗ್ಗಿಸಲು ಮತ್ತು ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ, ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ರಾಜ್ಯಪಾಲರ ಮೂಲಕ ಷಡ್ಯಂತ್ರ ರೂಪಿಸಿದ್ದಾರೆ. ಇತ್ತೀಚೆಗೆ ದೆಹಲಿಗೆ ರಾಜ್ಯಪಾಲರನ್ನು ಕರೆಸಿಕೊಂಡು ಅವರಿಗೆ ಸ್ಪಷ್ಟ ಸೂಚನೆ ನೀಡಿ ಕಳಿಸಿದ್ದಾರೆ ಎಂದು ಕಿಡಿ ಕಾರಿದರು.
ರಾಜಕೀಯ ದ್ವೇಷ ಮತ್ತು ಒತ್ತಡಕ್ಕೆ ಮಣಿದು ರಾಜ್ಯಪಾಲರು ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ ಇದು ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ. ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲದ ಬಿಜೆಪಿ, ಚುನಾಯಿತ ಸರ್ಕಾರಗಳನ್ನು ಬೀಳಿಸುವ ಕೆಲಸ ಮಾಡುತ್ತಿದೆ. ಕರ್ನಾಟಕದಲ್ಲಿ ಎರಡು ಬಾರಿ ವಾಮ ಮಾರ್ಗದಿಂದ ಆಡಳಿತಕ್ಕೆ ಬಂದ ಬಿಜೆಪಿ ಮತ್ತೆ ತನ್ನ ಹಳೆ ಚಾಳಿ ಮುಂದುವರಿಸಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ ಎಂದು ಅವರು ದೂರಿದರು.
ರಾಜ್ಯದ ಜನತೆ ಬಿಜೆಪಿಗೆ ಖಂಡಿತ ಪಾಠ ಕಲಿಸುತ್ತಾರೆ. ಇದನ್ನು ಕ್ಷಮಿಸುವುದಿಲ್ಲ ಕಾಂಗ್ರೆಸ್ ಪಕ್ಷ ರಾಜ್ಯಪಾಲರ ಪಕ್ಷಪಾತ ಧೋರಣೆಯ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡಲಿದೆ. ಜನರ ಬೆಂಬಲ ಸರ್ಕಾರದ ಪರವಾಗಿದೆ. ರಾಜ್ಯಪಾಲರು ಅನುಸರಿಸಿರುವ ಪಕ್ಷಪಾತ ಧೋರಣೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು, ಇಲ್ಲವೇ ಇವರನ್ನು ರಾಷ್ಟ್ರಪತಿಗಳು ವಜಾ ಮಾಡಬೇಕು ಎಂದರು.