Home ಅಪಘಾತ ಅಮರಾವತಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಮೂವರು ನವಜಾತ ಶಿಶುಗಳು ಸಾವು

ಅಮರಾವತಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಮೂವರು ನವಜಾತ ಶಿಶುಗಳು ಸಾವು

0

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ನವಜಾತ ಶಿಶುಗಳು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಸೋಮವಾರ ನಡೆದಿದೆ.

ಆಸ್ಪತ್ರೆಯ ಮೂರನೇ ಮಹಡಿಯಲ್ಲಿರುವ ಎನ್‌ಐಸಿಯುನಲ್ಲಿ ಬೆಳಗಿನ ಜಾವ ಸುಮಾರು 3.30ಕ್ಕೆ ವೆಂಟಿಲೇಟರ್‌ನಲ್ಲಿ ಏಕಾಏಕಿ ಸ್ಫೋಟ ಸಂಭವಿಸಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಕ್ಷಣಾರ್ಧದಲ್ಲಿ ವಾರ್ಡ್‌ನಲ್ಲಿ ಹೊಗೆ ಹಾಗೂ ಬೆಂಕಿ ಆವರಿಸಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಅವಘಡ ಸಂಭವಿಸಿದ ವೇಳೆ ವಾರ್ಡ್‌ನಲ್ಲಿ ಒಟ್ಟು 39 ನವಜಾತ ಶಿಶುಗಳು ದಾಖಲಾಗಿದ್ದವು. ಬೆಂಕಿ ಕಾಣಿಸಿಕೊಂಡ ತಕ್ಷಣ ಕರ್ತವ್ಯದಲ್ಲಿದ್ದ ವೈದ್ಯರು, ನರ್ಸ್‌ಗಳು ಹಾಗೂ ಇತರ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಶಿಶುಗಳನ್ನು ವೆಂಟಿಲೇಟರ್‌ಗಳಿಂದ ಹೊರತೆಗೆದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು.

ಸಿಬ್ಬಂದಿಯ ತ್ವರಿತ ಕಾರ್ಯಾಚರಣೆಯಿಂದ ಹಲವು ಶಿಶುಗಳನ್ನು ರಕ್ಷಿಸಲಾಗಿದ್ದು, ಆರು ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಮೂವರು ನವಜಾತ ಶಿಶುಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ವೆಂಟಿಲೇಟರ್ ಸ್ಫೋಟವೇ ಬೆಂಕಿ ಅವಘಡಕ್ಕೆ ಕಾರಣವಾಗಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದ್ದು, ಘಟನೆಯ ನಿಖರ ಕಾರಣ ತಿಳಿಯಲು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

You cannot copy content of this page

Exit mobile version