ನವದೆಹಲಿ: ಇಂದು ಸೋಮವಾರ ಲೋಕಸಭಾ ಚುನಾವಣೆಯ ನಂತರದ ಮೊದಲ ಅಧಿವೇಶನ ಆರಂಭವಾಗಿದ್ದು, ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ನೂತನ ಸಂಸದರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಗಮನ ಸೆಳೆದರು.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ವಿರುದ್ಧ 2,84,620 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿಯೂ ಆದ ಎಚ್.ಡಿ.ಕುಮಾರಸ್ವಾಮಿ, ನಂತರ ಎನ್‌ಡಿಎ ಸರಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದರು.
ಈ ಮೊದಲು ಪ್ರಥಮ ಬಾರಿಗೆ ಸಂಸದರಾಗಿ ಚುನಾಯಿತರಾಗಿದ್ದ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲ್, ಲೋಕಸಭೆಯಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಹೊಸ ಪರಂಪರೆಗೆ ನಾಂದಿ ಹಾಡಿದ್ದರು. ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದವರಲ್ಲಿ ಎಚ್‌ಡಿಕೆ ಎರಡನೇಯವರಾಗಿದ್ದಾರೆ.