ಭೀಕರ ರಸ್ತೆ ಅಪಘಾತ: ಐವರು ವೈದ್ಯಕೀಯ ವಿದ್ಯಾರ್ಥಿಗಳ ಸಾವು, ಇಬ್ಬರಿಗೆ ಗಂಭೀರ ಗಾಯ

ಕೇರಳ ರಾಜ್ಯದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ಈ ಘಟನೆಯಲ್ಲಿ ಐವರು ವೈದ್ಯಕೀಯ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ.

ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪೊಲೀಸರ ಪ್ರಕಾರ ಈ ಘಟನೆ ಸೋಮವಾರ ರಾತ್ರಿ 9 ಗಂಟೆ ಸುಮಾರಿಗೆ ಅಲಪ್ಪುಳ ಜಿಲ್ಲೆಯಲ್ಲಿ ನಡೆದಿದೆ. ವಂದನಂ ಮೆಡಿಕಲ್ ಕಾಲೇಜಿನ ಮೊದಲ ವರ್ಷದ ಏಳು ಮಂದಿ ಎಂಬಿಬಿಎಸ್ ವಿದ್ಯಾರ್ಥಿಗಳು ಗುರುವಾಯೂರಿನಿಂದ ಕಾಯಂಕುಲಂಗೆ ಕಾರಿನಲ್ಲಿ ಹೊರಟರು. ನಡುರಸ್ತೆಯಲ್ಲಿ ಅವರು ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಇಬ್ಬರು ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಉಳಿದ ಇಬ್ಬರನ್ನು ಅಲಪ್ಪುಳ ಜಿಲ್ಲಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಮೃತರನ್ನು ಮಹಮ್ಮದ್, ಮುಹಾಸಿನ್, ಇಬ್ರಾಹಿಂ, ದೇವಾನಂದ್ ಮತ್ತು ಶ್ರೀದೀಪ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಬಸ್‌ನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು