ದೆಹಲಿ: 1984ರ ಸಿಖ್ ವಿರೋಧಿ ಗಲಭೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಸಂಸದ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ (80) ಅವರು ಗುರುವಾರ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ತಿಹಾರ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ಕರೆತಂದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
1984ರ ಅಕ್ಟೋಬರ್ 31 ರಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಯ ಬಳಿಕ ದೆಹಲಿಯಲ್ಲಿ ಭುಗಿಲೆದ್ದ ಸಿಖ್ ವಿರೋಧಿ ಗಲಭೆಯಲ್ಲಿ ಐವರ ಹತ್ಯೆ ಹಾಗೂ ಗುರುದ್ವಾರಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ 2018ರ ಡಿಸೆಂಬರ್‌ನಲ್ಲಿ ದೆಹಲಿ ಹೈಕೋರ್ಟ್ ಸಜ್ಜನ್ ಕುಮಾರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ದೋಷಿ ಎಂದು ತೀರ್ಪು ಪ್ರಕಟವಾದ ಬೆನ್ನಲ್ಲೇ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.
ಇದಾದ ನಂತರ, ಸರಸ್ವತಿ ವಿಹಾರ್‌ನಲ್ಲಿ ತಂದೆ-ಮಗನಾದ ಜಸ್ವಂತ್ ಸಿಂಗ್ ಮತ್ತು ತರುಣ್‌ದೀಪ್ ಸಿಂಗ್ ಅವರ ಹತ್ಯೆ ಪ್ರಕರಣದಲ್ಲೂ ರೌಸ್ ಅವೆನ್ಯೂ ವಿಶೇಷ ನ್ಯಾಯಾಲಯವು ಅವರಿಗೆ ಮತ್ತೊಂದು ಜೀವಾವಧಿ ಶಿಕ್ಷೆ ವಿಧಿಸಿತ್ತು.
ಔಟರ್ ದೆಹಲಿ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಸಜ್ಜನ್ ಕುಮಾರ್, ನಾಲ್ಕು ದಶಕಗಳ ಕಾಲ ನಡೆದ ಸಿಖ್ ವಿರೋಧಿ ಗಲಭೆ ಪ್ರಕರಣಗಳಲ್ಲಿ ಪ್ರಮುಖ ರಾಜಕೀಯ ವ್ಯಕ್ತಿಯಾಗಿ ವಿಚಾರಣೆ ಎದುರಿಸಿದ್ದರು.
