ಪುಣೆ: ಮಹಾರಾಷ್ಟ್ರದ ಪುಣೆ ನಗರದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶದ ನೂರಾರು ಮನೆಗಳು ಜಲಾವೃತವಾಗಿವೆ. ಈಗಾಗಲೇ ನಾಲ್ವರು ಸಾವಿಗೀಡಾಗಿದ್ದು, ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
ಮಳೆಯಿಂದ ಜಲಾವೃತಗೊಂಡಿರುವ ಮನೆಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಪ್ರಕ್ರಿಯೆ ಜಾರಿಯಲ್ಲಿದೆ. ಹವಾಮಾನ ಇಲಾಖೆ ಪುಣೆಯಾದ್ಯಂತ ಮುಂದಿನ 24 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ. ಮುನ್ನೆಚ್ಚರಿಕೆಯಿಂದ ಇರುವಂತೆ ನಾಗರಿಕರಿಗೆ ಸೂಚನೆ ನೀಡಲಾಗಿದೆ. ಶಾಲಾ–ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಪುಣೆ ಸುತ್ತಮುತ್ತಲಿನ ತಾಲ್ಲೂಕುಗಳಲ್ಲಿರುವ ಅನೇಕ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತದೆ. ಖಡಕ್‌ವಾಸ್ಲಾ ಜಲಾಶಯದಲ್ಲಿಯೂ ನೀರಿನ ಮಟ್ಟ ಏರಿಕೆಯಾಗಿದ್ದು ಈಗಾಗಲೇ 35,000 ಕ್ಯುಸೆಕ್‌ಗಿಂತ ಹೆಚ್ಚು ನೀರನ್ನು ಮತ್ತೆ ಹೊರಬಿಡಲಾಗುತ್ತಿದೆ ಬಿಡಲಾಗುತ್ತಿದೆ. ಮಳೆಯಿಂದಾಗಿ ನೀರಿನ ಮಟ್ಟ ಇನ್ನಷ್ಟು ಹೆಚ್ಚಳವಾಗುತ್ತಿರುವ ಕಾರಣ ನದಿಗೆ ಬಿಡುವ ನೀರಿನ ಪ್ರಮಾಣ 45,000 ಕ್ಯೂಸೆಕ್‌ಗೆ ಹೆಚ್ಚಲಿದೆ. ಇದರಿಂದಾಗಿ ಇನ್ನಷ್ಟು ತಗ್ಗು ಪ್ರದೇಶಗಳು ಜಲಾವೃತವಾಗುವ ಸಾಧ್ಯತೆ ಇದ್ದು, ಜನರನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪುಣೆ ಮಹಾನಗರ ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ.