Friday, June 14, 2024

ಸತ್ಯ | ನ್ಯಾಯ |ಧರ್ಮ

60 ವರ್ಷ ಮೇಲ್ಪಟ್ಟ ನಾಗರಿಕರಿಗೆ ಉಚಿತ ನೇತ್ರ ತಪಾಸಣೆ, ಉಚಿತ ಕನ್ನಡಕ: ಬೊಮ್ಮಾಯಿ

ಚಾಮರಾಜನಗರ: ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ ನಾಗರಿಕರಿಗೆ ಉಚಿತ ನೇತ್ರ ತಪಾಸಣೆ ನಡೆಸಿ, ಉಚಿತ ಕನ್ನಡಕವನ್ನು ವಿತರಿಸುವ ಕಾರ್ಯಕ್ರಮಕ್ಕೆ ಶೀಘ್ರವೇ ಚಾಲನೆ ನೀಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದ್ದಾರೆ.

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿದ್ದು, ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಉದ್ಘಾಟನೆ ಸಮಾರಂಭದ ನಂತರ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಚಾಮರಾಜನಗರಕ್ಕೆ ನಾನು ಹಿಂದೆಯೂ ಭೇಟಿ ನೀಡಿದ್ದೇನೆ, ಮುಂದೆಯೂ ಭೇಟಿ ನೀಡಲಿದ್ದೇನೆ. ಚಾಮರಾಜ ನಗರಕ್ಕೆ ಭೇಟಿ ನೀಡಿದ್ದರಿಂದ ನಮ್ಮ ಶಕ್ತಿ ವೃದ್ಧಿಯಾಗಿದೆಯೇ ಹೊರತು ಕಮ್ಮಿಯಾಗಿಲ್ಲ. ಈ ನಗರದವರು ಮುತ್ತಿನಂತಾ ಜನರು, ಶ್ರೀಮಂತ ಹೃದಯಿಗಳು. ಇಲ್ಲಿಗೆ ಭೇಟಿ ನೀಡುವುದು ಒಂದು ಶುಭ ಸೂಚನೆ ಎಂದು ಮಾತನಾಡಿದ್ದಾರೆ.

ಸರ್ಕಾರಗಳು ತಾವು ಕೈಗೊಂಡ ಅಭಿವೃದ್ಧಿ ಆಧಾರದ ಮೇಲೆ ಚುನಾವಣೆಯಲ್ಲಿ ಮತ ಕೇಳಬೇಕೇ ವಿನಃ ಇನ್ನಾವುದೇ ವಿಚಾರದಿಂದಲ್ಲ. ಪ್ರಜಾಪ್ರಭುತ್ವದಲ್ಲಿ ಸಕಾರಾತ್ಮಕ ಹಾಗೂ ರಚನಾತ್ಮಕ ಆಡಳಿತ ನಿರ್ಮಾಣವಾಗಬೇಕೆ ಹೊರತು ಮತ್ತೊಬ್ಬರ ತಪ್ಪುಗಳನ್ನು ಎತ್ತಿ ತೋರಿಸುವ ಕೆಲಸಕ್ಕೆ ಪ್ರಾಧಾನ್ಯತೆ ನೀಡಬಾರದು. ಹಾಗಾದಾಗ ಮಾತ್ರೆ ಜನಪಯೋಗಿ ಸರ್ಕಾರದ ಉದ್ದೇಶಗಳು ನೆರವೇರುತ್ತವೆ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರ ಜನತೆಯ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದೆ. ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಕರ್ನಾಟಕ ರಾಜ್ಯ ರಚನೆಯಾದ ನಂತರ ಇದೇ ಮೊದಲ ಬಾರಿ ಒಂದೇ ವರ್ಷದಲ್ಲಿ 8000 ಶಾಲಾ ಕೊಠಡಿಗಳನ್ನು ನಿರ್ಮಿಸಿದ್ದೇವೆ. ರಾಜ್ಯದ 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುತ್ತಿದ್ದೇವೆ ಎಂದು ಮಾತನಾಡಿದ್ದಾರೆ.

ಅಲ್ಲದೇ ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ ನಾಗರಿಕರಿಗೆ ಉಚಿತ ನೇತ್ರ ತಪಾಸಣೆ ನಡೆಸಿ, ಉಚಿತ ಕನ್ನಡಕವನ್ನು ವಿತರಿಸುವ ಕಾರ್ಯಕ್ರಮಕ್ಕೆ ಶೀಘ್ರವೇ ಚಾಲನೆ ನೀಡುತ್ತೇವೆ ಎಂದು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು