Home ರಾಜ್ಯ ರಾಮನಗರ ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

0

ರಾಮನಗರ (ಕನಕಪುರ), ಮಾರ್ಚ್ 27: “ನಾನು ನಿರಂತರವಾಗಿ ಜನರ ಮಧ್ಯೆ ಇದ್ದು ಕೆಲಸ ಮಾಡಿದ್ದು, ಈಗ ನನಗೆ ಕೂಲಿ ಕೊಡಿ ಎಂದು ಕೇಳುತ್ತಿದ್ದೇನೆ. ಜನರಿಂದ ನನಗೆ ಉತ್ತಮ ಸ್ಪಂದನೆ ಸಿಗುತ್ತಿದೆ” ಎಂದು ಸಂಸದ ಡಿ.ಕೆ. ಸುರೇಶ್ ತಿಳಿಸಿದರು.

ಕನಕಪುರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು.

ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲಿ ಅನ್ಯ ಪಕ್ಷಗಳ ಕಾರ್ಯಕರ್ತರ ಸೇರ್ಪಡೆ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ;

“ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕರ್ತರು, ಸಾರ್ವಜನಿಕರು ಬಹಳ ಉತ್ಸಾಹದಿಂದ ನನಗೆ ಬೆಂಬಲ ನೀಡುತ್ತಿದ್ದಾರೆ. ಇದೇ ಕಾರಣಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಹಲವು ಕಾರ್ಯಕರ್ತರು ಆ ಪಕ್ಷಗಳನ್ನು ತೊರೆದು ನಮ್ಮ ಪಕ್ಷ ಸೇರುತ್ತಿದ್ದಾರೆ. ಇದರಿಂದಾಗಿ ನಮಗೆ ಮತ್ತಷ್ಟು ಶಕ್ತಿ ಹೆಚ್ಚಾಗಿದೆ” ಎಂದರು.

ನಾಳೆ 11 ಗಂಟೆಗೆ ನಾಮಪತ್ರ ಸಲ್ಲಿಕೆ:

ನಾಮಪತ್ರ ಸಲ್ಲಿಕೆ ವಿಚಾರವಾಗಿ ಕೇಳಿದಾಗ, “ನಾಳೆ ಬೆಳಗ್ಗೆ 11 ಗಂಟೆಗೆ ರಾಮನಗರದಲ್ಲಿ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರುಗಳಾದ ರಾಮಲಿಂಗಾ ರೆಡ್ಡಿ, ಗೃಹ ಸಚಿವರಾದ ಪರಮೇಶ್ವರ್ ಅವರು ಕೂಡ ಆಗಮಿಸಲಿದ್ದಾರೆ. ಅದೇ ರೀತಿ ಸಾರ್ವಜನಿಕರಿಗೂ ಆಹ್ವಾನ ನೀಡಿ, ನನಗೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದ್ದೇನೆ” ಎಂದು ತಿಳಿಸಿದರು.

ನಿಶಾ ಯೋಗೇಶ್ವರ್ ಪಕ್ಷ ಸೇರ್ಪಡೆ ಬಗ್ಗೆ ವರಿಷ್ಠರು ತೀರ್ಮಾನಿಸುತ್ತಾರೆ:

ಯೋಗೇಶ್ವರ್ ಅವರ ಪುತ್ರಿ ನಿಶಾ ಯೋಗೇಶ್ವರ್ ಅವರು ಪಕ್ಷ ಸೇರ್ಪಡೆಯಾಗುವ ಸುದ್ದಿ ಹರಿದಾಡುತ್ತಿದೆ ಎಂದು ಕೇಳಿದಾಗ, “ಈ ಬಗ್ಗೆ ಚರ್ಚೆ ನಡೆಯುತ್ತಿದ್ದು, ಪಕ್ಷದ ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡಲಿದ್ದಾರೆ. ಅವರು ಬಹಳ ದಿನಗಳಿಂದ ಪಕ್ಷ ಸೇರುವುದಾಗಿ ಹೇಳುತ್ತಿದ್ದಾರೆ. ಅವರ ಸ್ವಯಂ ತೀರ್ಮಾನದ ಬಗ್ಗೆ ಜಿಲ್ಲೆಯ ಮುಖಂಡರು ಹಾಗೂ ನಾಯಕರ ಜತೆ ಚರ್ಚೆ ಮಾಡಿ ಅವರ ಅಭಿಪ್ರಾಯದ ಮೇರೆಗೆ ತೀರ್ಮಾನಿಸಲಾಗುವುದು” ಎಂದು ತಿಳಿಸಿದರು.

ಕೋಲಾರದಲ್ಲಿ ಮುನಿಯಪ್ಪ ಅವರ ಕುಟುಂಬಕ್ಕೆ ಟಿಕೆಟ್ ನೀಡಬಾರದು ಎಂಬ ಆಗ್ರಹದೊಂದಿಗೆ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ರಾಜೀನಾಮೆ ಬೆದರಿಕೆ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ” ಎಂದು ತಿಳಿಸಿದರು.

You cannot copy content of this page

Exit mobile version