ಬೆಂಗಳೂರು: ಯುಗಾದಿ ಹಬ್ಬದ ಸಂದರ್ಭದಲ್ಲಿ ಹೈನುಗಾರಿಕೆಯಲ್ಲಿ ತೊಡಗಿರುವ ರೈತರಿಗೆ ಬೆಂಗಳೂರು ಹಾಲು ಒಕ್ಕೂಟ (ಬಮುಲ್) ಸಿಹಿ ಸುದ್ದಿಯನ್ನು ನೀಡಿದೆ. ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿಯಾಗಿ ₹1 ಪ್ರೋತ್ಸಾಹ ಧನ ನೀಡಲಾಗುವುದಾಗಿ ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಘೋಷಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಅವರು, ಬಮುಲ್ ವ್ಯಾಪ್ತಿಯಲ್ಲಿ ರೈತರಿಂದ ಕೋಟ್ಯಾಂತರ ಲೀಟರ್ ಹಾಲು ಖರೀದಿಸಲಾಗುತ್ತಿದ್ದು, ಹಾಲು ಉತ್ಪಾದಕರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಪಶು ಆಹಾರ ಮತ್ತು ಮೇವಿನ ಬೆಲೆ ಏರಿಕೆಯಿಂದ ರೈತರು ಎದುರಿಸುತ್ತಿರುವ ಆರ್ಥಿಕ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶವೂ ಇದಕ್ಕೆ ಕಾರಣವಾಗಿದೆ ಎಂದು ಹೇಳಿದರು.
ಈ ವರ್ಷ ಬಮುಲ್ ಸಂಸ್ಥೆಯು ಸುಮಾರು ₹500 ಕೋಟಿ ಹೆಚ್ಚುವರಿ ಟರ್ನ್‌ಓವರ್ ಸಾಧಿಸುವ ಗುರಿ ಹೊಂದಿದೆ. ಸಂಸ್ಥೆ ಈಗಾಗಲೇ ಸುಮಾರು ₹60 ಕೋಟಿ ಲಾಭದ ಮಟ್ಟಕ್ಕೆ ತಲುಪಿರುವ ಹಿನ್ನೆಲೆಯಲ್ಲಿ ಸಿಬ್ಬಂದಿಗಳಿಗೆ ಬಾಕಿ ಉಳಿದಿರುವ ಹಣವನ್ನು ಪಾವತಿಸಲು ತೀರ್ಮಾನಿಸಲಾಗಿದೆ. ಜೊತೆಗೆ ಕಾರ್ಮಿಕರಿಗೆ ಸುಮಾರು ₹6 ಕೋಟಿ ಡಿಎ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಅದೇ ವೇಳೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ₹5,000 ಬೋನಸ್ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಉತ್ತಮ ಗುಣಮಟ್ಟದ ಹಾಲು ಉತ್ಪಾದನೆಗೆ ಉತ್ತೇಜನ ನೀಡುವ ಗುರಿಯೊಂದಿಗೆ ಬಮುಲ್ ಕಾರ್ಯನಿರ್ವಹಿಸುತ್ತಿದೆ ಎಂದು ಡಿ.ಕೆ. ಸುರೇಶ್ ಹೇಳಿದರು.
ಬಮುಲ್‌ನ ಈ ನಿರ್ಧಾರದಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳ ಸಾವಿರಾರು ಹಾಲು ಉತ್ಪಾದಕರಿಗೆ ಲಾಭವಾಗಲಿದೆ. ಬೇಸಿಗೆಯ ಸಮಯದಲ್ಲಿ ಹಾಲಿನ ಉತ್ಪಾದನೆ ಕುಸಿಯುವ ಹಿನ್ನೆಲೆ ಉತ್ಪಾದನೆಯನ್ನು ಉತ್ತೇಜಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಯುಗಾದಿ ಹಬ್ಬದ ಮುನ್ನ ಪ್ರಕಟವಾದ ಈ ಘೋಷಣೆ ಹೈನುಗಾರಿಕೆಯಲ್ಲಿ ತೊಡಗಿರುವ ರೈತರಿಗೆ ಹೊಸ ಉತ್ಸಾಹ ನೀಡುವಂತಾಗಿದೆ.
