ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಅವರಣದಲ್ಲಾದ ಭೀಕರ ಕಾಲ್ತುಳಿತ ದುರಂತಕ್ಕೆ ಐಪಿಎಲ್ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ತಂಡದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿಯೇ ನೇರ ಕಾರಣ ಎಂದು ಕರ್ನಾಟಕ ಹೈಕೋರ್ಟ್ ಗೆ ಸರ್ಕಾರ ಮಾಹಿತಿ ನೀಡಿದೆ. ಅಷ್ಟೇ ಅಲ್ಲದೆ ಆರ್‌ಸಿಬಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸರ್ಕಾರ ಮುಂದಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಆವರಣದಲ್ಲಿ ಆರ್ ಸಿ ಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ 11 ಜನರು ಸಾವನ್ನಪ್ಪಿದ್ದರು. ಇದಕ್ಕೂ ಮುನ್ನ ಐಪಿಎಲ್ ಸಂಭ್ರಮಾಚರಣೆಗೆ ಯಾವುದೇ ಮುನ್ಸೂಚನೆ ನೀಡದೆ ಆರ್‌ಸಿಬಿ ಆಡಳಿತ ಮಂಡಳಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಅಭಿಮಾನಿಗಳಿಗೆ ಸೇರಲು ಹೇಳಿದ್ದನ್ನೇ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಫ್ರಾಂಚೈಸಿ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದೆ.
ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಮೂರ್ತಿ ಮೈಕೆಲ್ ಕುನ್ಹಾ ಸಮಿತಿಯಿಂದ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಾಗಿತ್ತು. ವರದಿಯ ಕುರಿತಂತೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗಿದೆ.
ಆರ್ ಸಿ ಬಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಅಲ್ಲದೇ ರಾಜ್ಯ ಕ್ರಿಕೆಟ್ ಸಂಸ್ಥೆಯ ವಿರುದ್ಧವೂ ಕ್ರಿಮಿನಲ್ ಕೇಸ್ ಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಇನ್ನೂ ಪೊಲೀಸ್ ಅಧಿಕಾರಿಗಳ ನಿರ್ಲಕ್ಷ್ಯ ವರದಿ ದೃಢೀಕರಿಸಲಾಗಿದೆ. ಅಲ್ಲದೇ ಪೊಲೀಸ್ ಅಧಿಕಾರಿಗಳ ವಿರುದ್ಧವೂ ಕ್ರಮಕ್ಕೆ ಶಿಫಾರಸ್ಸು ಮಾಡಲಾಗಿದೆ. ಹೀಗಾಗಿ ಪೊಲೀಸ್ ಅಧಿಕಾರಿಗಳ ವಿರುದ್ಧವೂ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಸಾಧ್ಯತೆ ಇದೆ.