Home ಜನ-ಗಣ-ಮನ ಅಂತೂ ರೈತ ಹೋರಾಟಕ್ಕೆ ಮಣಿದ ಸರ್ಕಾರ; ಕಬ್ಬಿಗೆ ಬೆಂಬಲ ಬೆಲೆ ನಿಗದಿ

ಅಂತೂ ರೈತ ಹೋರಾಟಕ್ಕೆ ಮಣಿದ ಸರ್ಕಾರ; ಕಬ್ಬಿಗೆ ಬೆಂಬಲ ಬೆಲೆ ನಿಗದಿ

0

ಕಳೆದ 9 ದಿನಗಳಿಂದ ಕಬ್ಬು ಬೆಳೆಗಾರರು ಬೀದಿಗಿಳಿದು ನಡೆಸಿದ ಹೋರಾಟಕ್ಕೆ ಕೊನೆಗೂ ಪ್ರತಿಫಲ ಸಿಕ್ಕಿದೆ. ಕಬ್ಬಿಗೆ 3,500 ರೂ. ಬೆಂಬಲ ಬೆಲೆಗೆ ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಸರ್ಕಾರ ರೈತ ಹೋರಾಟಕ್ಕೆ ಮಣಿದಿದೆ. ಪ್ರತಿ ಟನ್ ಕಬ್ಬಿಗೆ ಒಟ್ಟು 3,300 ರೂ. ನೀಡಲು ಸರ್ಕಾರ ನಿರ್ಧರಿಸಿದೆ.

ರೈತರೊಂದಿಗಿನ ಸಭೆಯ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರತಿ ಟನ್ ಕಬ್ಬಿಗೆ ಒಟ್ಟು 3,300 ರೂ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಟನ್ ಕಬ್ಬಿಗೆ 3200 ರೂ. ದರ ನಿಗದಿ ಮಾಡಲಾಗಿದ್ದು, ಜೊತೆಗೆ 100 ರೂ. ಸೇರಿಸಿ ಕೊಡುತ್ತೇವೆ. ಅಂದರೆ ಸರ್ಕಾರದಿಂದ 50 ರೂ., ಕಾರ್ಖಾನೆಯಿಂದ 50 ರೂ. ನೀಡಲಾಗುತ್ತದೆ. ಇದಕ್ಕೆ ಸಕ್ಕರೆ ಕಾರ್ಖಾನೆ ಮಾಲೀಕರು ಒಪ್ಪುವ ವಿಶ್ವಾಸವಿದೆ ಎಂದರು.

ಶೇ.11.25ರಷ್ಟು ರಿಕವರಿ ಇದ್ದರೆ ಟನ್‌ಗೆ 3250 ರೂ. ಮಾಲೀಕರು ನೀಡಬೇಕು. ಇದಕ್ಕೆ ಸರ್ಕಾರದಿಂದ 50 ರೂ. ಹೆಚ್ಚುವರಿಯಾಗಿ ಪಾವತಿಸಲು ತೀರ್ಮಾನಿಸಲಾಗಿದೆ. ಇದು ಇಡೀ ರಾಜ್ಯಕ್ಕೆ ಅನ್ವಯವಾಗಲಿದೆ. ರಿಕವರಿ ಕಡಿಮೆಯಾದರೆ ದರ ಸಹ ವ್ಯತ್ಯಾಸವಾಗಲಿದೆ. ಶೇ.10.25ರಷ್ಟು ರಿಕವರಿ ಇದ್ದರೆ ಟನ್‌ಗೆ 3200 ರೂ. ದರ ನಿಗದಿಪಡಿಸಲಾಗಿದೆ. ರೈತರ ಹಿತದೃಷ್ಟಿಯಿಂದ ಕೈಗೊಳ್ಳುವ ತೀರ್ಮಾನಗಳನ್ನು ಎಲ್ಲರೂ ಒಪ್ಪಿಕೊಳ್ಳಬೇಕು ಎಂದು ಸಿಎಂ ಹೇಳಿದ್ದಾರೆ.

ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಫ್‌ಆರ್‌ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರದ ಕೆಲಸ. ಕೇಂದ್ರ ಸರ್ಕಾರ ದಿನಾಂಕ 6-05-2025ರಂದು ಕಬ್ಬಿಗೆ ಎಫ್‌ಆರ್‌ಪಿ ನಿಗದಿಪಡಿಸಿದೆ. ಈ ಎಫ್‌ಆರ್‌ಪಿಯಲ್ಲಿ ಸಾಗಾಟ ಮತ್ತು ಕಟಾವು ವೆಚ್ಚ ಸಹ ಸೇರಿದೆ. ಸಕ್ಕರೆಯ ಎಂಎಸ್‌ಪಿ ಹೆಚ್ಚಳ ಮಾಡುವಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ನಾವು ಮನವಿ ಸಲ್ಲಿಸಿದ್ದೇವೆ. ಆದರೆ ಕೇಂದ್ರ ಸರ್ಕಾರ ಇದುವರೆಗೆ ಎಂಎಸ್‌ಪಿ ಹೆಚ್ಚಳ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ದೂರಿದರು.

ಕೇಂದ್ರ ಸರ್ಕಾರ ಕಬ್ಬಿಗೆ ನಿಗದಿಪಡಿಸಿರುವ ಎಫ್‌ಆರ್‌ಪಿ ವೈಜ್ಞಾನಿಕವಾಗಿಲ್ಲ. ಸಕ್ಕರೆ ಕಾರ್ಖಾನೆಗಳು ಇಳುವರಿ ರಿಕವರಿ ಕಡಿಮೆ ತೋರಿಸುತ್ತಿವೆ. ಇದನ್ನು ತಪ್ಪಿಸಲು ಪ್ರತಿ ಕಾರ್ಖಾನೆ ಎದುರು ಸರ್ಕಾರದ ವತಿಯಿಂದ ಪ್ರಯೋಗಾಲಯ ತೆರೆಯಬೇಕು. ಕೆಲವು ಕಾರ್ಖಾನೆಗಳು ಹಳೆಯ ಬಾಕಿಯನ್ನು ಉಳಿಸಿಕೊಂಡಿದ್ದು, ಇದರ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಮನವಿ ಮಾಡಿದ್ದಾರೆ.

ಸಕ್ಕರೆ ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್​ಗೆ 60 ಪೈಸೆ ತೆರಿಗೆ ನಿಗದಿಪಡಿಸುವ ಪ್ರಸ್ತಾವನೆಯನ್ನು ಮರು ಪರಿಶೀಲಿಸಬೇಕು ಎಂದು ಕಾರ್ಖಾನೆ ಮಾಲೀಕರು ಮನವಿ ಮಾಡಿದ್ದು, ಇದರ ಮರು ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಸಮಸ್ಯೆಗಳು ಅದೇ ರೀತಿ ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಗಳಿಂದ ಎದುರಿಸುತ್ತಿರುವ ಸಮಸ್ಯೆ ಕುರಿತು ಸಮಾಲೋಚನೆ ನಡೆಸಿ ಪರಿಹಾರ ಒದಗಿಸಲು ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

You cannot copy content of this page

Exit mobile version