ದೇವನಹಳ್ಳಿ ಭೂಸ್ವಾಧೀನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಮುಖಂಡರ ಜೊತೆಗೆ ಮಂಗಳವಾರ ಮಹತ್ವದ ಸಭೆಯನ್ನು ನಡೆಸಿದ್ದು, ಸಭೆಯಲ್ಲಿ ಒಟ್ಟಾರೆ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ರೈತ ಮುಖಂಡರ ಜೊತೆಗೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಧ್ಯ ಯಾವುದೇ ಒತ್ತಾಯಪೂರ್ವಕ ಭೂಸ್ವಾಧೀನ ಇಲ್ಲ ಎಂದು ಹೇಳಿದ್ದಾರೆ. ರೈತರು ಸ್ವಯಂಪ್ರೇರಿತವಾಗಿ ಭೂಮಿ ಕೊಡಲು ಮುಂದೆ ಬಂದರೆ ಮಾತ್ರ ಸರ್ಕಾರ ತೆಗೆದುಕೊಳ್ಳುತ್ತದೆ ಎಂದು ಸಭೆಯಲ್ಲಿ ಹೇಳಿದ್ದಾರೆ.
ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ 1198 ದಿನಗಳ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಇಂದು ರೈತರೊಂದಿಗೆ ನಡೆದ ಸಭೆಯಲ್ಲಿ ಕೆಐಎಡಿಬಿ ಅಂತಿಮ ಅಧಿಸೂಚನೆ ರದ್ದುಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಲ್ಲಿ ಕೃಷಿ ಭೂಮಿ ಇರುವುದನ್ನು ಮನಗಂಡು ಈ ಅಧಿಸೂಚನೆ ರದ್ದು ಮಾಡಿರುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.