ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಸರಣಿ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನಿಖೆಯನ್ನು ಇನ್ನಷ್ಟು ತೀವ್ರಗೊಳಿಸುವ ನಿಟ್ಟಿನಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿ ಆದೇಶ ಹೊರಡಿಸಿದೆ.
ಈ ತನಿಖಾ ತಂಡವು ಮುನಿರತ್ನ ವಿರುದ್ಧ ಹೊರಿಸಲಾಗಿರುವ ಆರೋಪಗಳ ಕುರಿತು ಕೂಲಂಕುಷವಾಗಿ ತನಿಖೆ ನಡಸಲಿದೆ. ತನಿಖಾ ತಂಡದ ಚುಕ್ಕಾಣಿಯನ್ನು ಸರ್ಕಾರ ಬಿ.ಕೆ.ಸಿಂಗ್ ಅವರಿಗೆ ವಹಿಸಿದೆ. ಬಿ ಕೆ ಸಿಂಗ್ ಈ ಹಿಂದೆ ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆಗಾಗಿ ನಿಯೋಜಿಸಿದ್ದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿಯೂ ಕಾರ್ಯನಿರ್ವಹಿಸಿದ್ದರು.
ಉಳಿದಂತೆ ತಂಡದ ಸದಸ್ಯರಾಗಿ ಲಾಭೂರಾಮ್ (ಐಪಿಎಸ್), ಸೌಮ್ಯಲತಾ (ಐಪಿಎಸ್) ಸಿ.ಎ ಸೈಮನ್ (ಪೊಲೀಸ್ ಅಧೀಕ್ಷಕರು) ತಂಡದ ಸದಸ್ಯರಾಗಿರಲಿದ್ದಾರೆ.
ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಬಂಧಿಸಲ್ಪಟ್ಟ ಶಾಸಕ ಜೈಲು ಸೇರುತ್ತಿದ್ದಂತೆ ಮುನಿರತ್ನ ವಿರುದ್ಧ ಅತ್ಯಾಚಾರ, ಬ್ಲ್ಯಾಕ್ ಮೇಲ್, ಹನಿಟ್ರ್ಯಾಪ್ ಪ್ರಕರಣ ದಾಖಲಾಗಿತ್ತು. ಜೈಲಿನಿಂದ ಬಿಡುಗಡೆಯಾಗಿ ಹೊರ ಬರುತ್ತಿದ್ದಂತೆ ಮುನಿರತ್ನ ಅವರನ್ನು ಅತ್ಯಾಚಾರ ಆರೋಪ ಪ್ರಕರಣದಲ್ಲಿ ಪೊಲೀಸರು ಮತ್ತೆ ಬಂಧಿಸಿದ್ದರು.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುನಿರತ್ನ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಈ ಮಧ್ಯೆ ರಾಜ್ಯ ಸರ್ಕಾರ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚನೆ ಮಾಡಿ ಆದೇಶ ಹೊರಡಿಸಿದೆ.