ಬೆಂಗಳೂರು, ಅ.2: ಹಾಸನಕ್ಕೆ ಐಐಟಿ ಮಂಜೂರಾದರೆ ಅದಕ್ಕೆ ಪೂರಕ ಭೂಮಿಯನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ. ಜಿಲ್ಲಾಡಳಿತದ ವತಿಯಿಂದ ತಿಂಗಳೊಳಗೆ ಭೂಮಿಯನ್ನು ಒದಗಿಸಿಕೊಡಲಾಗುವುದು ಎಂದು ಅಬಕಾರಿ ಸಚಿವರು ಹಾಗೂ ಹಾಸನ ಉಸ್ತುವಾರಿ ಸಚಿವರಾದ ಕೆ. ಎಂ. ಶಿವಲಿಂಗೇಗೌಡ ಅವರು ಭರವಸೆ ನೀಡಿದರು.
ವಿಕಾಸಸೌಧದಲ್ಲಿ ನಿನ್ನೆ ಕೆ. ಎಂ. ಶಿವಲಿಂಗೇಗೌಡ ಅವರ ಅಧ್ಯಕ್ಷತೆಯಲ್ಲಿ ಹಾಸನದಲ್ಲಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಕಾಲೇಜಿಗೆ ಸಂಬಂಧಿಸಿದ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಕೆಐಎಡಿವಿಯವರು ಕೈಗಾರಿಕ ಪ್ರದೇಶದ ಅಭಿವೃದ್ಧಿಗೆ ಹಾಗೂ ಐಐಟಿ ಕಾಲೇಜು ಕಟ್ಟಡ ನಿರ್ಮಾಣಕ್ಕಾಗಿ ಭೂಸ್ವಾಧೀನ ಪಡಿಸಿಕೊಂಡು ಏನೂ ಅಭಿವೃದ್ಧಿ ಕೆಲಸಗಳನ್ನು ಮಾಡದೆ ದಶಕಗಳಿಂದ ಉಳಿಸಿಕೊಂಡಿರುವುದು ಸ್ವೀಕಾರಾರ್ಹವಲ್ಲ. ಈ ಪ್ರದೇಶದಲ್ಲಿ ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಬೇಕು. ಜಮೀನು ಕಳೆದುಕೊಂಡ ರೈತರಿಗೆ ನ್ಯಾಯ ಸಿಗಬೇಕು. ಬಾಕಿಯಿರುವ ಪರಿಹಾರ ವಿತರಣೆ ಹಾಗೂ ಅಭಿವೃದ್ಧಿ ಪಡಿಸಿದ ನಿವೇಶನ ಹಂಚಿಕೆ ಕಾರ್ಯ ಪೂರ್ಣಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
