ರಾಮನಗರ: ಜನವರಿಯಲ್ಲಿ ನಡೆಯುವ ಸಂಕ್ರಾಂತಿ ಹಬ್ಬದ ನಂತರ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸೋಮವಾರ ಹೇಳಿದ್ದಾರೆ. 2019ರಲ್ಲಿ ಕಾಂಗ್ರೆಸ್-ಜೆಡಿ (ಎಸ್) ಸಮ್ಮಿಶ್ರ ಸರ್ಕಾರವನ್ನು ಉರುಳಿಸುವಲ್ಲಿ ಪಾತ್ರವಹಿಸಿದ ಪ್ರಮುಖ ನಾಯಕರಲ್ಲಿ ಯೋಗೇಶ್ವರ್ ಒಬ್ಬರಾಗಿದ್ದರಿಂದ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಚನ್ನಪಟ್ಟಣ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯೋಗೇಶ್ವರ್ ಸರ್ಕಾರ ಉಳಿಯುವುದು ಅನುಮಾನ ಎಂದರು.
ಪ್ರಸ್ತುತ ರಾಜಕೀಯ ಬೆಳವಣಿಗೆಗಳು ಮತ್ತು ಕಾಂಗ್ರೆಸ್ ನಾಯಕರ ನಡೆಗಳು ಇದಕ್ಕೆ ಕಾರಣವಾಗಿವೆ ಎಂದು ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.
2023ರ ನಂತರ ದೊಡ್ಡ ರಾಜಕೀಯ ಬದಲಾವಣೆಯ ನಿರೀಕ್ಷೆಯಿದೆ. ಕಾಂಗ್ರೆಸ್ ಪಕ್ಷದ ಅತೃಪ್ತ ಶಾಸಕರು ಈಗಾಗಲೇ ಬೇರೆ ರೀತಿಯಲ್ಲಿ ಯೋಚಿಸಲು ಪ್ರಾರಂಭಿಸಿದ್ದಾರೆ ಎಂದು ಅವರು ಹೇಳಿದರು.
“ನಾವು ‘ಆಪರೇಷನ್ ಹಸ್ತ’ ರೀತಿಯ ಯಾವುದೇ ಕ್ರಮವನ್ನು ಕೈಗೊಳ್ಳುವುದಿಲ್ಲ. ಕಾಂಗ್ರೆಸ್ ಶಾಸಕರು ನೀಡಿರುವ ಮಾಹಿತಿಯನ್ನಷ್ಟೇ ಹಂಚಿಕೊಳ್ಳುತ್ತಿದ್ದೇನೆ. ಆಡಳಿತಾರೂಢ ಸರ್ಕಾರದ ವಿರುದ್ಧ ಕಾಂಗ್ರೆಸ್‌ನ ಶಾಸಕರು ಬಂಡಾಯದ ಬಾವುಟ ಹಾರಿಸಲಿದ್ದಾರೆ ಎಂದು ಯೋಗೇಶ್ವರ್ ಹೇಳಿದ್ದಾರೆ.
ಕೆಲವು ಕಾಂಗ್ರೆಸ್ ನಾಯಕರು ವೈಯಕ್ತಿಕವಾಗಿ ಮಾತನಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕರು ಡಮ್ಮಿ ಪೀಸ್ ಆಗಿದ್ದಾರೆ. ತಮಗೆ ಶಾಸಕರಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಅಳಲು ತೋಡಿಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದರು.
“ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವುದರಿಂದಾಗಿ ನಮಗೆ ಹಣ ಸಿಗುತ್ತಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಅಭಿವೃದ್ಧಿ ಕಾರ್ಯಗಳಿಗೆ ಸರಕಾರದಲ್ಲಿ ಹಣವಿಲ್ಲ. ಇದರಿಂದಾಗಿ ಕಾಂಗ್ರೆಸ್ ಶಾಸಕರು ನಿರುದ್ಯೋಗಿಗಳಾಗಿದ್ದಾರೆ,” ಎಂದು ಹೇಳಿಕೆ ನೀಡಿದ ಅವರು, ಕಾಂಗ್ರೆಸ್ ಶಾಸಕರು ತಮ್ಮ ಭವಿಷ್ಯದ ಬಗ್ಗೆ ಚಿಂತಿತರಾಗಿದ್ದಾರೆ ಎಂದರು.
“ಸಂಕ್ರಾಂತಿ ಹಬ್ಬದ ನಂತರ ಇದರ ಪರಿಣಾಮಗಳಿಗೆ ನೀವೆಲ್ಲರೂ ಸಾಕ್ಷಿಯಾಗುತ್ತೀರಿ. ನಾವು ಆಪರೆಷನ್ ನಡೆಸುತ್ತಿಲ್ಲ, ಯಾರೂ ನಮ್ಮ ಸಂಪರ್ಕದಲ್ಲಿ ಇಲ್ಲ” ಎಂದು ಯೋಗೇಶ್ವರ್ ಹೇಳಿದ್ದಾರೆ.