ಅಹಮದಾಬಾದ್: ಬಿಜೆಪಿ ಆಡಳಿತವಿರುವ ಗುಜರಾತ್‌ನ ಆನಂದ್ ಜಿಲ್ಲೆಯಲ್ಲಿ ಶನಿವಾರ ಸಂಜೆ ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಓವರ್‌ಬ್ರಿಡ್ಜ್ (ಆರ್‌ಒಬಿ) ಕುಸಿದು ಬಿದ್ದಿರುವ ಆಘಾತಕಾರಿ ಘಟನೆ ನಡೆದಿದೆ. ಅದೃಷ್ಟವಶಾತ್ ಈ ಭೀಕರ ಅಪಘಡದಲ್ಲಿ ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೇತುವೆಯ ನಿರ್ಮಾಣ ಕಾರ್ಯದಲ್ಲಿ ಕಂಡುಬಂದ ಕಳಪೆ ಕಾಮಗಾರಿ ಹಾಗೂ ಗುಣಮಟ್ಟದ ಕೊರತೆಯೇ ಈ ಕುಸಿತಕ್ಕೆ ಪ್ರಮುಖ ಕಾರಣ ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ-48 ರಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಅಡಾಸ್ ಗ್ರಾಮದ ಬಳಿ ಈ ರೈಲ್ವೆ ಓವರ್‌ಬ್ರಿಡ್ಜ್ ನಿರ್ಮಿಸಲಾಗುತ್ತಿತ್ತು. ಶನಿವಾರ ರಾತ್ರಿ ಸುಮಾರು 7.30ರ ವೇಳೆಗೆ ಈ ಬ್ರಿಡ್ಜ್‌ನ ಬೃಹತ್ ಪಿಲ್ಲರ್ (ಸ್ತಂಭ) ಒಂದು ಭಾರಿ ಶಬ್ದದೊಂದಿಗೆ ದಿಢೀರನೆ ಕುಸಿದು ಬಿದ್ದಿದೆ. ಪಿಲ್ಲರ್ ನೆಲಸಮವಾಗುತ್ತಿದ್ದಂತೆ ಆತಂಕಗೊಂಡ ಸ್ಥಳೀಯರು ಪೊಲೀಸರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿ, ಮುಂದಿನ ಅಪಾಯಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಇಡೀ ಪ್ರದೇಶವನ್ನು ಸಂಪೂರ್ಣವಾಗಿ ಸೀಲ್‌ಡೌನ್ ಮಾಡಿದ್ದಾರೆ.
