ಚಾಮರಾಜನಗರ : ಕಾವೇರಿ ವನ್ಯಧಾಮದಲ್ಲಿ ನಡೆದ ಎನ್‌ಕೌಂಟರ್ (Encounter) ಪ್ರಕರಣ ಖಂಡಿಸಿ ವಿವಿಧ ಸಂಘಟನೆಗಳು ಹನೂರು ಪಟ್ಟಣ (Hanur) ಬಂದ್‌ಗೆ ಕರೆ (Bundh) ನೀಡಿರುವ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.
ಹನೂರು ಪಟ್ಟಣದಲ್ಲಿರುವ ಅರಣ್ಯ ಇಲಾಖೆಯ ಕಚೇರಿ ಸುತ್ತಮುತ್ತ ಹೆಚ್ಚುವರಿ ಭದ್ರತೆ ಕಲ್ಪಿಸಲಾಗಿದ್ದು, ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿರುವ ಹಿನ್ನೆಲೆಯಲ್ಲಿ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಆದರೆ ಬಂದ್‌ಗೆ ವರ್ತಕರ ಸಂಘದಿಂದ ಬೆಂಬಲ ವ್ಯಕ್ತವಾಗಿಲ್ಲ. ಹೀಗಾಗಿ ಪಟ್ಟಣದಲ್ಲಿ ಬಹುತೇಕ ಅಂಗಡಿ-ಮುಂಗಟ್ಟುಗಳು ಎಂದಿನಂತೆ ತೆರೆದಿದ್ದು, ವ್ಯಾಪಾರ ವಹಿವಾಟು ಸಾಮಾನ್ಯವಾಗಿ ನಡೆಯುತ್ತಿದೆ. ರಸ್ತೆಗಳಲ್ಲೂ ವಾಹನ ಸಂಚಾರಕ್ಕೆ ಯಾವುದೇ ದೊಡ್ಡ ಮಟ್ಟದ ಅಡ್ಡಿ ಕಂಡುಬಂದಿಲ್ಲ.
ವಿವಿಧ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಬಂದ್ ಸಂಪೂರ್ಣ ಯಶಸ್ವಿಯಾಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದ್ದು, ಪ್ರತಿಭಟನೆಗೆ ಮಾತ್ರ ಸೀಮಿತವಾಗುವ ನಿರೀಕ್ಷೆ ಇದೆ. ಪರಿಸ್ಥಿತಿಯ ಮೇಲೆ ಪೊಲೀಸರು ನಿರಂತರ ನಿಗಾ ಇರಿಸಿದ್ದಾರೆ.
ಇನ್ನು ಮುಂಜಾಗ್ರತಾ ಕ್ರಮವಾಗಿ ಹನೂರು ತಾಲೂಕಿನಲ್ಲಿ ಇಂದು ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪ್ರತಿಭಟನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
ಕಾವೇರಿ ವನ್ಯಧಾಮದ ಎನ್‌ಕೌಂಟರ್ ಪ್ರಕರಣದ ಕುರಿತು ವಿವಿಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಹನೂರು ಪಟ್ಟಣದಲ್ಲಿ ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ.
