ಕಲಬುರಗಿ: ಮುಖ್ಯಮಂತ್ರಿ ಗಾದಿ ಬಿಟ್ಟು ಹೋಗುವುದಿಲ್ಲ ಎಂಬ ಸಂದೇಶ ರವಾನಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಸನ ಸಮಾವೇಶ ಹಮ್ಮಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗುರುವಾರ ಹೇಳಿದ್ದಾರೆ.
ಇಲ್ಲಿ ನಡೆಯುತ್ತಿರುವ ವಕ್ಫ್ ವಿರೋಧಿ ಹೋರಾಟದ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ‘ಹಾಸನ ಸಮಾವೇಶ ಸಿದ್ದರಾಮಯ್ಯನವರ ಶಕ್ತಿ ಪ್ರದರ್ಶನವಾಗಿದೆ. ಸಿಎಂ ಸ್ಥಾನ ಬಿಟ್ಟುಕೊಡುವುದಿಲ್ಲ ಎಂಬ ಸಂದೇಶ ರವಾನಿಸಲು ಅವರು ಬಯಸಿದ್ದರು. ಆದರೆ ಡಿ.ಕೆ.ಶಿವಕುಮಾರ್ ಸಿ ಎಮ್ ಸ್ಥಾನಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ, ಅವರು ಕಾಂಗ್ರೆಸ್ ಕಾರ್ಯಕ್ರಮ ಎಂದು ಬಿಂಬಿಸುವ ಮೂಲಕ ಸಮಾವೇಶವನ್ನು ಹೈಜಾಕ್ ಮಾಡಲು ಯತ್ನಿಸಿದ್ದಾರೆ’’ ಎಂದು ವಿಜಯೇಂದ್ರ ಹೇಳಿದರು.
“ತಮ್ಮ ಮತ್ತು ಸಿದ್ದರಾಮಯ್ಯ ನಡುವೆ ಅಧಿಕಾರ ಹಂಚಿಕೆ ಒಪ್ಪಂದವಿದೆ ಎಂದು ಶಿವಕುಮಾರ್ ಹೇಳುತ್ತಾರೆ. ಆದರೆ ಯಾವುದೇ ಒಪ್ಪಂದವಿಲ್ಲ ಎಂದು ಸಿಎಂ ಅವರ ಹೇಳಿಕೆಯನ್ನು ತಿರಸ್ಕರಿಸಿದರು. ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಕಾಂಗ್ರೆಸ್‌ನಲ್ಲಿನ ಆಂತರಿಕ ಕಚ್ಚಾಟ ತೀವ್ರಗೊಳ್ಳುತ್ತದೆ” ಎಂದು ಅವರು ಹೇಳಿದರು.