ಹಾಸನ ಹೊರತುಪಡಿಸಿ ಜೆಡಿಎಸ್ ಪಕ್ಷದ ಮೂರು ಲೋಕಸಭಾ ಅಭ್ಯರ್ಥಿಗಳ ಸ್ಥಾನದ ಬಗ್ಗೆ ಈಗ ಜೆಡಿಎಸ್ ಪಕ್ಷದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ಅದರಂತೆ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಣಕ್ಕಿಳಿಯಲಿದ್ದಾರೆ.
ಇಂದು ಮಂಗಳವಾರ, ಬೆಂಗಳೂರಿನಲ್ಲಿರುವ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅವರ ನಿವಾಸದಲ್ಲಿ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪಕ್ಷ ಹೆಸರಿಸಿದೆ. ಆ ಮೂಲಕ ಕಳೆದ ಬಾರಿಯಂತೆ ಮಂಡ್ಯದಲ್ಲಿ ಹೈವೋಲ್ಟೇಜ್ ಚುನಾವಣಾ ಕದನ ನಿರೀಕ್ಷಿಸಲಾಗಿದೆ. ಅಲ್ಲದೇ ಹಾಸನ ಕ್ಷೇತ್ರಕ್ಕೆ ಪ್ರಜ್ವಲ್ ರೇವಣ್ಣ ಅವರನ್ನು ಕಣಕ್ಕಿಳಿಸಿದೆ.
ಕೋಲಾರ ಲೋಕಸಭಾ ಮೀಸಲು ಕ್ಷೇತ್ರಕ್ಕೆ ಬಿಜೆಪಿಯೊಂದಿಗೆ ತೀವ್ರ ಚೌಕಾಸಿ ನಡೆಸಿದ್ದ ಪಕ್ಷವು ಇನ್ನೂ ಅಭ್ಯರ್ಥಿಯನ್ನು ಹೆಸರಿಸಿಲ್ಲ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಂಗಾರಪೇಟೆ ಕ್ಷೇತ್ರದಲ್ಲಿ ಪರಾಜಿತ ಅಭ್ಯರ್ಥಿ ಮಲ್ಲೇಶ್ ಬಾಬು ಅವರೇ ಮುಂಚೂಣಿಯಲ್ಲಿದ್ದರೂ, ಇನ್ನೂ ಚರ್ಚೆ ನಡೆಯುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇನ್ನು ಕೋಲಾರಕ್ಕೆ ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್ ಹಾಗೂ ದೇವನಹಳ್ಳಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರ ಹೆಸರನ್ನು ಪರಿಗಣಿಸಲಾಗುತ್ತಿದೆ. ಕೋಲಾರದಿಂದ ಸ್ಪರ್ಧಿಸುವ ಅಭ್ಯರ್ಥಿಯನ್ನೂ ಮಂಗಳವಾರ ಪ್ರಕಟಿಸಲಾಗುವುದು ಎಂದು ಮೂಲಗಳು ತಿಳಿಸಿವೆ.