ಬೆಂಗಳೂರು: ಶಿಡ್ಲಘಟ್ಟ ನಗರಸಭೆಯ ಮಹಿಳಾ ಆಯುಕ್ತರಿಗೆ ಅವಾಚ್ಯವಾಗಿ ಬೈದು ಬೆದರಿಕೆ ಹಾಕಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡನ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಈ ಸಂಬಂಧ ಬುಧವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ.
ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಮತ್ತು ಶಿಡ್ಲಘಟ್ಟ ನಗರಸಭೆ ಆಯುಕ್ತರಾದ ಅಮೃತಾ ಗೌಡ ಅವರ ನಡುವಿನ ಸಂಭಾಷಣೆಯ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬ್ಯಾನರ್ ತೆರವುಗೊಳಿಸಿದ್ದಕ್ಕೆ ಕೋಪಗೊಂಡ ರಾಜೀವ್ ಗೌಡ, ಆಡಿಯೋದಲ್ಲಿ ಅಮೃತಾ ಅವರನ್ನು ಅವಾಚ್ಯವಾಗಿ ನಿಂದಿಸಿ, ಬೆದರಿಕೆ ಹಾಕಿರುವುದು ಸ್ಪಷ್ಟವಾಗಿದೆ.
ಮಹಿಳಾ ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದ ಕುಮಾರಸ್ವಾಮಿ, ರಾಜೀವ್ ಗೌಡನನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. “ಒಬ್ಬ ಮಹಿಳೆಯಾಗಿ, ನೀವು (ಶಾಲಿನಿ ರಜನೀಶ್) ಮಹಿಳಾ ಅಧಿಕಾರಿಗಳ ಮೇಲಿನ ಇಂತಹ ವರ್ತನೆಯನ್ನು ಸಹಿಸಬಾರದು. ಅಧಿಕಾರಿಗೆ ಬೆದರಿಕೆ ಹಾಕಿದ ಕಾಂಗ್ರೆಸ್ ಮುಖಂಡನ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು” ಎಂದು ಕುಮಾರಸ್ವಾಮಿ ಮುಖ್ಯ ಕಾರ್ಯದರ್ಶಿಯವರಿಗೆ ಖಡಕ್ ಆಗಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಅಲ್ಲದೆ, ಮಹಿಳಾ ಅಧಿಕಾರಿಗಳ ಸುರಕ್ಷತೆಯನ್ನು ಖಾತ್ರಿಪಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆಯೂ ಕೇಂದ್ರ ಸಚಿವರು ಸೂಚಿಸಿದರು. ರಾಜ್ಯದಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, “ನಿಮ್ಮ ಕೆಳ ಹಂತದಲ್ಲಿ ಕೆಲಸ ಮಾಡುವ ಮಹಿಳಾ ಅಧಿಕಾರಿಗಳ ಸುರಕ್ಷತೆಯನ್ನು ನೀವು ಖಚಿತಪಡಿಸಿಕೊಳ್ಳಬೇಕು” ಎಂದು ತಿಳಿಸಿದರು.
