ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಜೊತೆಗೆ ಕೈಜೋಡಿಸಲು ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಈ ಬಗ್ಗೆ ಗ್ರೀನ್ ಸಿಗ್ನಲ್ ನೀಡಿದ್ದು, ಬಿಜೆಪಿ – ಜೆಡಿಎಸ್ ಒಟ್ಟಾಗಿ ಚುನಾವಣೆ ಎದುರಿಸುವುದು ಪಕ್ಕಾ ಆದಂತಾಗಿದೆ.
ಈಗಾಗಲೇ ರಾಜ್ಯ ಬಿಜೆಪಿ ನಿಯೋಗವೊಂದನ್ನು ಬಿಜೆಪಿ ಹೈಕಮಾಂಡ್ ಬಳಿ ಹೋಗಿ, ಸಧ್ಯದ ಪರಿಸ್ಥಿತಿಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಎದುರಿಸುವುದು ಕಷ್ಟ ಸಾಧ್ಯ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಮಾನ ವಿರೋಧಿ ಜೆಡಿಎಸ್ ಪಕ್ಷದ ಸಹಕಾರ ಪಡೆದರೆ ಗೆಲುವಿನ ಸಮೀಪದಲ್ಲಿ ಇರುವ ಅಭ್ಯರ್ಥಿಗಳನ್ನಾದರೂ ಗೆಲ್ಲಿಸಬಹುದು. ಈ ನಿಟ್ಟಿನಲ್ಲಿ ಜೆಡಿಎಸ್ ಪಕ್ಷದ ಜೊತೆಗೆ ಮೈತ್ರಿಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿಕೊಂಡಿದೆ.
ಇದನ್ನು ಪರಿಗಣಿಸಿರುವ ಬಿಜೆಪಿ ಹೈಕಮಾಂಡ್ ಜೆಡಿಎಸ್ ಗೆ ನಾಲ್ಕು ಅಥವಾ 5 ಲೋಕಸಭಾ ಸ್ಥಾನ ಬಿಟ್ಟುಕೊಡಲು ಒಪ್ಪಿಗೆ ಸೂಚಿಸಿದೆ ಎನ್ನಲಾಗಿದೆ. ಈ ಬಗ್ಗೆ ಸಣ್ಣ ಮಾಹಿತಿ ಹೊರಹಾಕಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ‘ಅಮಿತ್ ಶಾ ಅವರು 4 ಸ್ಥಾನಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಒಪ್ಪಿಕೊಂಡಿದ್ದಾರೆ. ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡರೆ ಬಿಜೆಪಿ ಪಕ್ಷಕ್ಕೆ ಹೆಚ್ಚು ಶಕ್ತಿ ಬರಲಿದೆ’ ಎಂದಿದ್ದಾರೆ.
ರಾಜ್ಯದಲ್ಲಿ 4 ಲೋಕಸಭಾ ಸ್ಥಾನಗಳಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಈಗಾಗಲೇ ವರಿಷ್ಠರು ನಮಗೆ ದೆಹಲಿಯಿಂದ ಸೂಚನೆ ನೀಡಿದ್ದಾರೆ. ಉಭಯ ಪಕ್ಷಗಳ ವರಿಷ್ಠರ ಮಧ್ಯೆ ಮಾತುಕತೆ ನಡೆದಿದೆ ಎಂದಿದ್ದಾರೆ.
ಆದರೆ ಜೆಡಿಎಸ್ ಇಲ್ಲಿ 6 ಲೋಕಸಭಾ ಕ್ಷೇತ್ರಕ್ಕೆ ಬೇಡಿಕೆ ಇಟ್ಟಿದೆ. ಆದರೆ ಬಿಜೆಪಿ 4 ಕ್ಕಿಂತ ಹೆಚ್ಚು ಕ್ಷೇತ್ರ ಬಿಟ್ಟು ಕೊಡಲು ಹಿಂದೇಟು ಹಾಕುತ್ತಿದೆ. ಆದರೆ ಎರಡೂ ಪಕ್ಷಗಳು ಒಂದು ಒಮ್ಮತಕ್ಕೆ ಬಂದರೆ 5 ಕ್ಷೇತ್ರಗಳನ್ನಾದರೂ ಬಿಟ್ಟು ಕೊಟ್ಟು, ಜೆಡಿಎಸ್ ನಿರಾತಂಕವಾಗಿ ಬಿಜೆಪಿ ಜೊತೆಗೆ ಕೈಜೋಡಿಸಬಹುದು. ಇತ್ತ ಸೋಲಿನ ಸುಳಿಯಲ್ಲಿ ಇರುವ ರಾಜ್ಯ ಬಿಜೆಪಿಗೂ ಇದರ ಅಗತ್ಯ ಇರುವುದರಿಂದ, ಜೆಡಿಎಸ್ ಒತ್ತಡಕ್ಕೆ ಮಣಿಯಬಹುದು ಎನ್ನಲಾಗಿದೆ.
ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಸ್ಥಾನಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಗೆ ಮುಂದಿನ ಚುನಾವಣೆಯಲ್ಲಿ ಮಾಸ್ಟರ್ ಸ್ಟ್ರೋಕ್ ಕೊಡಲು ನಿರ್ಧರಿಸಿರುವ ಜೆಡಿಎಸ್ ವರಿಷ್ಠ ದೇವೇಗೌಡರು ಈಗಾಗಲೇ ಲೋಕಸಭೆ ಚುನಾವಣೆ ಸಂಬಂಧ ದೆಹಲಿಯಲ್ಲಿ ಬಿಜೆಪಿ ವರಿಷ್ಠ ನಾಯಕರನ್ನು ಭೇಟಿ ಮಾಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ಇತ್ತೀಚೆಗೆ ಪ್ರಜ್ವಲ್ ರೇವಣ್ಣ ಅವರ ಕೋರ್ಟ್ ಕೇಸ್ ಗೆ ಸಂಬಂಧಿಸಿದಂತೆ ವಕೀಲರ ಭೇಟಿಗೆ ದೆಹಲಿಗೆ ತೆರಳಿದ್ದ ದೇವೇಗೌಡರು ಇದೇ ವೇಳೆ ರಹಸ್ಯವಾಗಿ ಅಮಿತ್ ಶಾ ಜೊತೆ ಚರ್ಚೆ ನಡೆಸಿದ್ದಾರೆ. ಉಭಯ ನಾಯಕರ ನಡುವೆ ಮೈತ್ರಿ ಬಗ್ಗೆ ಅನೌಪಚಾರಿಕವಾಗಿ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.