Friday, January 23, 2026

ಸತ್ಯ | ನ್ಯಾಯ |ಧರ್ಮ

ದಲಿತ ಮುಖ್ಯಮಂತ್ರಿ ವಿಚಾರ ಹೈಕಮಾಂಡ್ ತೀರ್ಮಾನ – ಕೆ.ಎಚ್. ಮುನಿಯಪ್ಪ

ಬೆಂಗಳೂರು: ತಾನು ಕೂಡ ಮುಖ್ಯಮಂತ್ರಿ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದೇನೆ. ಆದರೆ ದಲಿತ ಮುಖ್ಯಮಂತ್ರಿ ವಿಚಾರವನ್ನು ಕಾಂಗ್ರೆಸ್ ಹೈಕಮಾಂಡೇ ತೀರ್ಮಾನಿಸಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.

ನಗರದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಲಿತ ಮುಖ್ಯಮಂತ್ರಿ ವಿಚಾರ ಇಂದು–ನಿನ್ನೆಯದಲ್ಲ. ಇದು ಮಲ್ಲಿಕಾರ್ಜುನ ಖರ್ಗೆ ಅವರ ಕಾಲದಿಂದಲೂ ನಡೆದುಕೊಂಡು ಬಂದ ಆಸೆ ಮತ್ತು ಬೇಡಿಕೆಯಾಗಿದೆ ಎಂದು ಹೇಳಿದರು. ಆದರೆ ಇಂತಹ ಮಹತ್ವದ ವಿಷಯದಲ್ಲಿ ಅಂತಿಮ ತೀರ್ಮಾನವನ್ನು ಹೈಕಮಾಂಡೇ ಕೈಗೊಳ್ಳುತ್ತದೆ ಎಂದರು.

ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಪಕ್ಷವು 80 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೂ ಅವರಿಗೆ ಮುಖ್ಯಮಂತ್ರಿ ಸ್ಥಾನ ದೊರೆಯಲಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್‌ಗೆ ಶೇ.75ರಷ್ಟು ಮತಗಳು ಬಂದಿದ್ದರೂ ಅವರಿಗೆ ತಕ್ಕಮಟ್ಟಿನ ಪ್ರಾತಿನಿಧ್ಯ ಸಿಗಲಿಲ್ಲ ಎಂದು ಮುನಿಯಪ್ಪ ಬೇಸರ ವ್ಯಕ್ತಪಡಿಸಿದರು.

ಈ ಎಲ್ಲ ವಿಚಾರಗಳನ್ನು ಹೈಕಮಾಂಡ್‌ ಚೆನ್ನಾಗಿ ಅರ್ಥ ಮಾಡಿಕೊಂಡಿದ್ದು, ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು. ನಾವು ಪಕ್ಷದ ಶಿಸ್ತಿನ ಸಿಪಾಯಿಗಳಾಗಿದ್ದು, ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧರಾಗಿದ್ದೇವೆ ಎಂದರು.

ಇದೇ ವೇಳೆ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಕಾರ್ಯಕ್ರಮಗಳು ಪಕ್ಷದ ಗೆಲುವಿಗೆ ಪ್ರಮುಖ ಕಾರಣವಾಗಲಿವೆ ಎಂದು ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page