ಬೆಂಗಳೂರು: ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠವು, ಏಕ ಸದಸ್ಯ ಪೀಠ ನೀಡಿದ್ದ ಮಧ್ಯಂತರ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.
ಮುಖ್ಯ ನ್ಯಾಯಮೂರ್ತಿ ವಿಭು ಭಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ. ನವೆಂಬರ್ 26ರವರೆಗೆ ಏಕ ಸದಸ್ಯ ಪೀಠದ ಆದೇಶಕ್ಕೆ ಮಧ್ಯಂತರ ತಡೆ ನೀಡಲಾಗಿದ್ದು, ಇದರಿಂದ ಸರ್ಕಾರಕ್ಕೆ ತಾತ್ಕಾಲಿಕ ಜಯ ದೊರೆತಿದೆ.
ಪ್ರಕರಣದ ತನಿಖೆಗಾಗಿ ಎಸ್‌ಐಟಿ (ವಿಶೇಷ ತನಿಖಾ ತಂಡ) ರಚನೆಗೆ ಏಕ ಸದಸ್ಯ ಪೀಠವು ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸರ್ಕಾರವು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು.
ಆರು ಎಕರೆ ಭೂಮಿಯನ್ನು ಒತ್ತುವರಿ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಹಾಜರುಪಡಿಸುವಂತೆ ಎಸ್‌ಐಟಿ ನೋಟಿಸ್ ಜಾರಿಗೊಳಿಸಿತ್ತು. ಆದರೆ, ಏಕ ಸದಸ್ಯ ಪೀಠವು ಎಸ್‌ಐಟಿ ರಚನೆಗೆ ತಡೆಯಾಜ್ಞೆ ನೀಡಿದ್ದರಿಂದ, ತಡೆಯಾಜ್ಞೆ ತೆರವುಗೊಳಿಸುವಂತೆ ಎಜಿ ಶಶಿಕಿ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದರು. ಸರ್ಕಾರದ ಮನವಿಯನ್ನು ಪುರಸ್ಕರಿಸಿದ ಹೈಕೋರ್ಟ್, ಈಗ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.