Saturday, March 8, 2025

ಸತ್ಯ | ನ್ಯಾಯ |ಧರ್ಮ

ಬಿಜೆಪಿ ಶಾಸಕ ಮುನಿರತ್ನಗೆ ಬಿಸಿ ಮುಟ್ಟಿಸಿದ ಹೈಕೋರ್ಟ್; ಪ್ರಕರಣ ರದ್ದು ಕೋರಿದ್ದ ಅರ್ಜಿ ವಜಾ

ವಂಚನೆ ಹಾಗೂ ಸುಲಿಗೆ ಪ್ರಕರಣದ ಊರುಳಲ್ಲಿ ಸಿಕ್ಕಿ ಹಾಕಿಕೊಂಡಿರುವ ಬಿಜೆಪಿ ಶಾಸಕ ಮುನಿರತ್ನಗೆ ಹೈಕೋರ್ಟ್ ಮತ್ತೊಂದು ಶಾಕ್ ನೀಡಿದೆ. ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜಸ್ಟೀಸ್ ಎಂ ನಾಗಪ್ರಸನ್ನ ಅವರಿದ್ದ ಪೀಠ ತಿರಸ್ಕರಿಸಿದೆ. ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಗುತ್ತಿಗೆದಾರ (Contractor) ಚಲುವರಾಜು ಸಲ್ಲಿಸಿದ್ದ ದೂರು ರದ್ದತಿಗೆ ಹೈಕೋರ್ಟ್ ನಿರಾಕರಿಸಿದೆ.

ಅಷ್ಟೇ ಅಲ್ಲದೆ ಪ್ರಕರಣದ ವಿಚಾರಣೆಗೆ ವಿಶೇಷ ತನಿಖಾ ದಳ(ಎಸ್‌ಐಟಿ) ರಚನೆ ಮಾಡಿರುವ ಸರ್ಕಾರದ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಸರ್ಕಾರ, ಆದೇಶಗಳನ್ನು ಹೊರಡಿಸುವ ಸಂದರ್ಭದಲ್ಲಿ ನಿಯಮಗಳನ್ನು ಅನುಸರಿಸಬೇಕು ಎಂದು ಮೌಖಿಕವಾಗಿ ಸಲಹೆ ನೀಡಿದೆ.

ಶಾಸಕ ಮುನಿರತ್ನ ತಮ್ಮಿಂದ 20 ಲಕ್ಷ ರೂ. ಹಣ ಪಡೆದು ವಂಚಿಸಿದ್ದಾರೆ. ಹಣ ಹಿಂದಿರುಗಿಸಲು ಕೇಳಿದಕ್ಕೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದಾರೆ. ಜಾತಿ ಹೆಸರು ತೆಗೆದು ನನ್ನನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ ಗುತ್ತಿದಾರ ಚೆಲುವರಾಜು 2024ರ ಸೆ.13ರಂದು ನಗರದ ವೈಯಾಲಿಕಾವಲ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಈ ಪ್ರಕರಣ ರದ್ದುಪಡಿಸುವಂತೆ ಕೋರಿ ಮುನಿರತ್ನ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಚೆಲುವರಾಜುಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿತ್ತು. ಇವರ ವಿರುದ್ಧ ಎರಡು ಎಫ್‌ಐಆರ್ ದಾಖಲಾಗುತ್ತಿದ್ದಂತೆ ಪೊಲೀಸರು, ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಬಳಿ ಶಾಸಕ ಮುನಿರತ್ನ ಅವರನ್ನು ಬಂಧಿಸಿದ್ದರು. ಸೆ. 14ರಂದು ಬಂಧನಕ್ಕೊಳಗಾಗಿದ್ದ ಮುನಿರತ್ನ ಅವರಿಗೆ ಅ. 14ರಂದು ಜಾಮೀನು ಸಿಕ್ಕಿತ್ತು. ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗುವುದರೊಳಗೆ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಮತ್ತೆ ಬಂಧಿಸಿದ್ದರು.

ಇದರ ಜೊತೆಗೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಮುನಿರತ್ನ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ದೂರು ದಾಖಲಿಸಿದ್ದರು. ಆ ಪ್ರಕರಣದಲ್ಲಿ ಮುನಿರತ್ನ ಅವರನ್ನು ಮತ್ತೆ ಬಂಧಿಸಲಾಗಿತ್ತು. ತದನಂತರ ಆ ಪ್ರಕರಣದಲ್ಲಿಯೂ ಅವರಿಗೆ ಜಾಮೀನು ಸಿಕ್ಕಿತ್ತು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page