Friday, June 14, 2024

ಸತ್ಯ | ನ್ಯಾಯ |ಧರ್ಮ

ಮುಸ್ಲಿಂ ವರ್ತಕರಿಗೆ ಬಹಿಷ್ಕಾರ: ಶರಣ್ ಪಂಪ್‌ವೆಲ್ ವಿರುದ್ಧದ ಎಫ್‌ಐಆರ್‌ ತಡೆ ಹಿಡಿದ ಹೈಕೋರ್ಟ್‌

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ದೇವಸ್ಥಾನದ ಆವರಣದಲ್ಲಿ ಮುಸ್ಲಿಂ ವರ್ತಕರಿಗೆ ವ್ಯಾಪಾರ ವಹಿವಾಟು ನಡೆಸಲು ಅವಕಾಶ ಕಲ್ಪಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕೋಮುದ್ವೇಷ ಎಬ್ಬಿಸಿದ ಆರೋಪದಡಿ ಹಿಂದೂ ಕಾರ್ಯಕರ್ತ ಶರಣ್ ಪಂಪ್‌ವೆಲ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.

ತಮ್ಮ ಅಂಗಡಿಗಳಲ್ಲಿ ಕೇಸರಿ ಧ್ವಜ ಹಾಕಿದ್ದ ಹಿಂದೂ ವ್ಯಾಪಾರಿಗಳ ಅಂಗಡಿಗಳಲ್ಲಿ ಮಾತ್ರ ವ್ಯಾಪಾರ ನಡೆಸುವಂತೆ ಹಿಂದೂಗಳಿಗೆ ಸೂಚನೆ ನೀಡಿದ್ದಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ದಕ್ಷಿಣ ಪೊಲೀಸರು ವಿಹಿಂಪ ಕಾರ್ಯಕರ್ತ ಶರಣ್ ಪಂಪ್‌ವೆಲ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಕೋಮು ಸೌಹಾರ್ದತೆಗೆ ಧಕ್ಕೆ ತರುವ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಅವರು ಎಫ್‌ಐಆರ್‌ಗೆ ತಡೆಯಾಜ್ಞೆ ನೀಡಿದ್ದು, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ಗೆ ನೋಟಿಸ್ ಜಾರಿ ಮಾಡಿದ್ದಾರೆ.

ಹಿಂದುತ್ವ ಕಾರ್ಯಕರ್ತ ಶರಣ್ ಪಂಪ್‌ವೆಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್, ಎಫ್‌ಐಆರ್‌ನಲ್ಲಿ ಯಾವುದೇ ಆಧಾರವಿಲ್ಲ ಎಂದು ನ್ಯಾಯಾಲಯಕ್ಕೆ ಹೇಳಿದರು.

ಪೊಲೀಸರು ಸ್ವಯಂಪ್ರೇರಿತವಾಗಿ ದಾಖಲಿಸಿರುವ ಪ್ರಕರಣ ರಾಜಕೀಯ ಪ್ರೇರಿತವಾಗಿದ್ದು, ದುರುದ್ದೇಶದಿಂದ ದಾಖಲಿಸಲಾಗಿದೆ ಎಂದು ಶ್ಯಾಮ್ ನ್ಯಾಯಾಲಯದಲ್ಲಿ ಹೇಳಿದ್ದಾರೆ. ಎಫ್‌ಐಆರ್ ರದ್ದುಗೊಳಿಸುವಂತೆಯೂ ಹಿರಿಯ ವಕೀಲರು ಒತ್ತಾಯಿಸಿದರು.

ಪ್ರಸಿದ್ಧ ಮಂಗಳಾ ದೇವಿ ದೇವಸ್ಥಾನದ ಆಡಳಿತ ಮಂಡಳಿಯು ವಾರ್ಷಿಕ ಧಾರ್ಮಿಕ ಜಾತ್ರೆಯಲ್ಲಿ ವ್ಯಾಪಾರ ನಡೆಸಲು ಆರಂಭಿಕ ಹಂತದಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ನೀಡಿತ್ತು. ಆದರೆ, ಇದನ್ನು ವರ್ತಕರ ಗುಂಪೊಂದು ಪ್ರಶ್ನಿಸಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿತ್ತು. ನಂತರ ದೇವಸ್ಥಾನದ ಆವರಣದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೂ ವ್ಯಾಪಾರ ವಹಿವಾಟು ನಡೆಸಲು ಅವಕಾಶ ಕಲ್ಪಿಸಲಾಗಿತ್ತು.

ಆದರೆ, ಹಿಂದುತ್ವವಾದಿಗಳು ಹಿಂದೂಗಳ ಸ್ಟಾಲ್‌ಗಳ ಮೇಲೆ ಕೇಸರಿ ಧ್ವಜವನ್ನು ಹಾರಿಸುವ ಅಭಿಯಾನವನ್ನು ಪ್ರಾರಂಭಿಸಿದರು. ಈ ಮಳಿಗೆಗಳಿಂದಲೇ ವ್ಯಾಪಾರ ನಡೆಸುವಂತೆ ಜನರಿಗೆ ಕರೆ ನೀಡಲಾಯಿತು. ಅಕ್ಟೋಬರ್ 16ರಂದು ಶರಣ್ ಪಂಪ್‌ವೆಲ್ ಮತ್ತು ಇತರರ ನೇತೃತ್ವದಲ್ಲಿ ಹಿಂದೂ ಕಾರ್ಯಕರ್ತರು ಅಂಗಡಿಗಳ ಮೇಲೆ ಕೇಸರಿ ಧ್ವಜವನ್ನು ಹಾರಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಶರಣ್ ಪಂಪ್‌ವೆಲ್ ತಮ್ಮ ವಿರುದ್ಧದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

Related Articles

ಇತ್ತೀಚಿನ ಸುದ್ದಿಗಳು