ತ್ರಿಶೂರ್‌ನಲ್ಲಿ ಭೀಕರ ಅಪಘಾತ: ಕಾರು ಲಾರಿಗೆ ಡಿಕ್ಕಿ, ತಮಿಳುನಾಡು ಮೂಲದ 8 ವಿದ್ಯಾರ್ಥಿಗಳ ಸಾವು

ತ್ರಿಶೂರ್: ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಕೈಪಮಂಗಲಂ ಸಮೀಪದ ಪನಂಬಿಕುನ್ನು ಪ್ರದೇಶದಲ್ಲಿ ರಾತ್ರಿ ಸುಮಾರು 11.40ರ ವೇಳೆಗೆ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಕಾರಿನಲ್ಲಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.

ಅಪಘಾತಕ್ಕೀಡಾದವರು ತಮಿಳುನಾಡಿಗೆ ಸೇರಿದ ವಿದ್ಯಾರ್ಥಿಗಳು ಎನ್ನಲಾಗಿದ್ದು, ಮೃತರ ಗುರುತು ಹಾಗೂ ಅಪಘಾತದ ನಿಖರ ಕಾರಣದ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೇ ಅಥವಾ ಬೇರೆ ಯಾವುದೇ ಅಂಶ ಕಾರಣವಾಗಿದೆಯೇ ಎಂಬುದರ ಕುರಿತು ತನಿಖೆ ಮುಂದುವರಿದಿದೆ.

Related Articles

ಇತ್ತೀಚಿನ ಸುದ್ದಿಗಳು