Home ಅಪರಾಧ ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ: ಐವರು ಸಾವು

ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ: ಐವರು ಸಾವು

0

ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್ ಬಳಿ ಇಂದು ಬೆಳಗ್ಗೆ ಅತಿವೇಗ ಮತ್ತು ಅಜಾಗರೂಕತೆಯಿಂದ ಮುನ್ನುಗ್ಗಿದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಮೃತರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶ್ವೇತಾ (29), ಅಂಜಲಿ (26), ಸಂದೀಪ್ (26), ವಿಠಲ್ (55) ಮತ್ತು ಶಶಿಕಲಾ (40) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ, ಈ ಐವರು ಕಾರಿನಲ್ಲಿ ಹೋಟೆಲ್ ವ್ಯವಹಾರಕ್ಕಾಗಿ ಬಾಗಲಕೋಟೆಗೆ ತೆರಳುತ್ತಿದ್ದ ವೇಳೆ, ಲಾರಿಯೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಎಲ್ಲರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ, ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಸ್ಥಳೀಯರ ಸಹಾಯದಿಂದ ಕಾರಿನಲ್ಲಿ ಸಿಕ್ಕಿಹಾಕಿಕೊಂಡಿದ್ದ ಮೃತದೇಹಗಳನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಕಾರಿನಲ್ಲಿದ್ದವರ ಗಮ್ಯಸ್ಥಾನ ಮತ್ತು ಇತರ ವಿವರಗಳನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಅಪಘಾತದಿಂದಾಗಿ ಈ ಮಾರ್ಗದಲ್ಲಿ ಕೆಲವು ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ನಂತರ, ಪೊಲೀಸರು ಕ್ರೇನ್ ಬಳಸಿ ಧ್ವಂಸಗೊಂಡ ಕಾರನ್ನು ತೆರವುಗೊಳಿಸಿ, ಸಂಚಾರವನ್ನು ಸುಗಮಗೊಳಿಸಿದರು.

You cannot copy content of this page

Exit mobile version