ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ನಡೆದ ಅಪಘಾತದಲ್ಲಿ 17ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಮತ್ತು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿ (ಕಂಟೈನರ್) ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಡೀಸೆಲ್ ಟ್ಯಾಂಕ್‌ಗೆ ಲಾರಿ ಗುದ್ದಿದ ಪರಿಣಾಮ ಮೊದಲು ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡು, ಕ್ಷಣಾರ್ಧದಲ್ಲೇ ಬಸ್‌ಗೆ ಬೆಂಕಿ ಹತ್ತಿಕೊಂಡಿದೆ.
ನೋಡ ನೋಡುತ್ತಿದ್ದಂತೆ ಬಸ್ ಹೊತ್ತಿ ಉರಿದಿದ್ದು, ಒಳಗಿದ್ದ ಪ್ರಯಾಣಿಕರು ಬೆಂಕಿಯ ಕನ್ನಾಲಿಗೆಗೆ ಸಿಲುಕಿ ಸಜೀವ ದಹನವಾಗಿದ್ದಾರೆ. ಬಸ್‌ನಲ್ಲಿ ಒಟ್ಟು 31 ಪ್ರಯಾಣಿಕರು ಟಿಕೆಟ್ ಬುಕ್ ಮಾಡಿದ್ದು, ಚಾಲಕ ಸೇರಿ 32 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಕೆಲವರು ಸಮಯಕ್ಕೆ ಸರಿಯಾಗಿ ಬಸ್‌ನಿಂದ ಇಳಿದರೂ, 17ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅತಿವೇಗವೇ ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದ್ದು, ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
