Friday, April 11, 2025

ಸತ್ಯ | ನ್ಯಾಯ |ಧರ್ಮ

ಕರ್ನಾಟಕದ ಕಳಪೆ ರಸ್ತೆಗಳಿಗೆ ಇನ್ನೇಷ್ಟು ಬಲಿ?: ಸರ್ಕಾರದ ವಿರುದ್ಧ ಹೆಚ್‌.ಡಿ.ಕೆ ವಾಗ್ದಾಳಿ

ಮಂಡ್ಯ: ಜಿಲ್ಲೆಯ ಕಾರಿಮನೆ ಗೇಟ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ನಿವೃತ್ತ ಯೋಧರೊಬ್ಬರು ಸಾವನ್ನಪ್ಪಿದ್ದು, ಕರ್ನಾಟಕದ ಕಳಪೆ ರಸ್ತೆಗಳಿಗೆ ಇನ್ನೇಷ್ಟು ಬಲಿ ಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ರಾಜ್ಯಾದ್ಯಂತ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳಿಗೆ ಬಲಿ ಆಗುವ ಸರಣಿ ಮುಂದುವರಿದಿರುವುದು ಅತ್ಯಂತ ಕಳವಳಕಾರಿ. ಮಂಡ್ಯದಲ್ಲಿ ರಸ್ತೆಗೆ ನಿವೃತ್ತ ಯೋಧರೊಬ್ಬರು ಬಲಿಯಾಗಿರುವುದು ನನಗೆ ತೀವ್ರ ದುಃಖ ಉಂಟು ಮಾಡಿದೆ. ಕರ್ನಾಟಕದ ಕಳಪೆ ರಸ್ತೆಗಳಿಗೆ ಪರಿಹಾರವೇ ಇಲ್ಲವೇ? ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೇನೆಯಿಂದ ಇತ್ತೀಚೆಗಷ್ಟೇ ನಿವೃತ್ತಿ ಆಗಿದ್ದ ಕುಮಾರ್ (38) ಎಂಬ ಯೋಧರು ಮಂಡ್ಯದ ಕಾರಿಮನೆ ಗೇಟ್ ಬಳಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ರಸ್ತೆಗುಂಡಿಗೆ ಬಿದ್ದೊಡನೆ ಅವರ ಮೇಲೆ ಲಾರಿ ಹರಿದು ಕೊನೆಯುಸಿರೆಳೆದಿರುವುದು ಈ ವ್ಯವಸ್ಥೆಯ ಕರಾಳತೆಗೆ ಹಿಡಿದ ಕನ್ನಡಿ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಪೊಲೀಸ್ ತರಬೇತಿ ಪಡೆಯುತ್ತಿದ್ದ ಕುಮಾರ್ ಅವರು, ಬದುಕಿನಲ್ಲಿ ಅರ್ಥಪೂರ್ಣ ಕನಸುಗಳನ್ನು ಕಟ್ಟಿಕೊಂಡಿದ್ದರು. ತಮ್ಮ ತಂದೆಯವರ ಜತೆ ಸಾತನೂರು ಗ್ರಾಮಕ್ಕೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ. ಆ ವೃದ್ಧ ತಂದೆಗೆ ಆಸರೆಯಾಗಿದ್ದ ಪುತ್ರ ಗುಂಡಿಯಿಂದ ಜೀವ ಕಳೆದುಕೊಂಡಿದ್ದು ಕರ್ನಾಟಕದ ಕಳಪೆ ರಸ್ತೆಗಳಿಗೆ ಹಿಡಿದ ಕನ್ನಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಣ್ಮುಂದೆಯೇ ಜೀವ ಬಿಟ್ಟ ಪುತ್ರನ ಪಾರ್ಥೀವ ಶರೀರದ ಮುಂದೆ ಗೋಳಾಡುತ್ತಿದ್ದ ಆ ವೃದ್ಧ ತಂದೆಯನ್ನು ಕಂಡು ನನ್ನ ಮನಸ್ಸಿಗೆ ಆಘಾತವಾಗಿದೆ. ಇನ್ನೆಷ್ಟು ತಂದೆ ತಾಯಂದಿರು ಇಂಥ ಗುಂಡಿಗಳಿಂದ ಅನಾಥರಾಗಬೇಕು? ಗುಂಡಿಗಳ ಮೇಲೆ ಸಂಪತ್ತಿನ ಗೋಪುರ ಕಟ್ಟುವ ಈ ಬಿಜೆಪಿ ಸರಕಾರಕ್ಕೆ ಆತ್ಮಸಾಕ್ಷಿ ಎನ್ನುವುದೇ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಯೋಧರ ದುರಂತ ಸಾವಿಗೆ ಕಾರಣವಾದ ರಸ್ತೆಯೂ ಸೇರಿ ಮಂಡ್ಯ ನಗರಸಭೆ ವ್ಯಾಪ್ತಿಯ ಎಲ್ಲಾ ರಸ್ತೆಗಳ ಅಭಿವೃದ್ಧಿಗೆ 50 ಕೋಟಿ ರೂ.ಗಳನ್ನು ನಾನು ಮುಖ್ಯಮಂತ್ರಿ ಆಗಿದ್ದಾಗ ಬಿಡುಗಡೆ ಮಾಡಿದ್ದೆ. ದುರಂತ ಎಂದರೆ, ನನ್ನ ಸರಕಾರವನ್ನು ಆಪರೇಷನ್ ಕಮಲದ ಮೂಲಕ ಉರುಳಿಸಿ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರ ಆ 50 ಕೋಟಿ ರೂ. ಹಣವನ್ನು ಕೂಡಲೇ ಹಿಂಪಡೆಯಿತು ಎಂದು ತಿಳಿಸಿದ್ದಾರೆ.

ರಾಜಕೀಯ ಕಾರಣಕ್ಕೆ ಹಣ ವಾಪಸ್ ಪಡೆದ ರಾಜ್ಯ ಬಿಜೆಪಿ ಸರಕಾರವು ರಸ್ತೆಗಳಲ್ಲಿ ಮುಗ್ದ ಜನರ ಹೆಣಗಳನ್ನು ನೋಡಿ ಮೆರೆಯುತ್ತಿದೆ. ಇದು ಅಮಾನುಷ. ಸರಕಾರವು ನೊಂದ ಕುಟುಂಬಕ್ಕೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page