ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಪತನಗೊಂಡರೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಜೆಪಿಯನ್ನು ಸಂಪರ್ಕಿಸಿದರೆ ಅವರಿಗೆ ಬೆಂಬಲ ನೀಡಲು ಸಿದ್ಧರಿರುವುದಾಗಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಬುಧವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದಿಂದ ಹೊರಬಂದು ಬಿಜೆಪಿಗೆ ಬಾಹ್ಯ ಬೆಂಬಲ ನೀಡಿದರೆ ಅದನ್ನು ಒಪ್ಪಿಕೊಳ್ಳುತ್ತೇವೆ. ಆದರೆ, ಅವರನ್ನು ಮುಖ್ಯಮಂತ್ರಿ ಮಾಡುವ ವಿಚಾರವು ಕೇಂದ್ರದ ವರಿಷ್ಠರ ನಿರ್ಧಾರಕ್ಕೆ ಬಿಟ್ಟ ವಿಷಯ. ಒಂದು ವೇಳೆ ಕೇಂದ್ರದ ವರಿಷ್ಠರು ಅವರನ್ನೇ ಮುಖ್ಯಮಂತ್ರಿ ಮಾಡಲು ಸೂಚಿಸಿದರೆ, ಬೆಂಬಲ ಕೊಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಶಿಡ್ಲಘಟ್ಟದಲ್ಲಿ ₹2,000 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಕುರಿತು ಪ್ರತಿಕ್ರಿಯಿಸಿದ ಅವರು, “ಇವು ಕೇವಲ ಘೋಷಣೆಗಳಷ್ಟೇ. ಸರ್ಕಾರದ ಬಳಿ ನಿಜವಾಗಿಯೂ ಹಣವಿದ್ದರೆ ಬೆಂಗಳೂರಿನ ಗುಂಡಿಗಳನ್ನು ಮುಚ್ಚುತ್ತಿತ್ತು” ಎಂದು ವ್ಯಂಗ್ಯವಾಡಿದರು.
“ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತ ಸತ್ತು ಹೋಗಿದೆ. ರಾಜ್ಯದ ಜನರು ಕಂಗಾಲಾಗಿದ್ದಾರೆ. ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವುದು ಸೇರಿದಂತೆ ರೈತರ ಹಲವು ಸಮಸ್ಯೆಗಳಿದ್ದರೂ, ಅವುಗಳ ಪರಿಹಾರಕ್ಕೆ ಸರ್ಕಾರ ಮುಂದಾಗುತ್ತಿಲ್ಲ. ಆದ್ದರಿಂದ ಈ ಸರ್ಕಾರ ಅಧಿಕಾರದಲ್ಲಿ ಇರಬಾರದು” ಎಂದು ಅವರು ತಿಳಿಸಿದರು.
