Friday, June 14, 2024

ಸತ್ಯ | ನ್ಯಾಯ |ಧರ್ಮ

ಸಂವಿಧಾನ ಬದಲಿಸಲು ಪ್ರಯತ್ನಿಸಿದರೆ ರಾಜೀನಾಮೆ ನೀಡುತ್ತೇನೆ: ಕೇಂದ್ರ ಸಚಿವ ಅಠವಳೆ

ಭಂಡಾರಾ (ಮಹಾರಾಷ್ಟ್ರ): ಸಂವಿಧಾನವನ್ನು ಬದಲಿಸುವ ಉದ್ದೇಶ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಖಂಡಿತ ಇಲ್ಲ. ಅಂಥ ಒಂದು ಉದ್ದೇಶ ಇದ್ದದ್ದು ಗೊತ್ತಾದರೆ ನಾನು ಅವತ್ತೇ ರಾಜಿನಾಮೆ ನೀಡುತ್ತೇನೆ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್ ಅಠವಳೆ ಘೋಷಿಸಿದ್ದಾರೆ.

 ಮಹಾರಾಷ್ಟ್ರದ ಭಂಡಾರಾ-ಗೊಂಡಿಯಾ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಸುನಿಲ್ ಮೆಂಧೆ ಪರ ಪ್ರಚಾರ ಜಾಥಾದಲ್ಲಿ ಭಾಗವಹಿಸಿದ್ದ ಸಂದರ್ಭಧಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಂವಿಧಾನವನ್ನು ಬದಲಾಯಿಸಲು ಯೋಜಿಸುತ್ತಿದೆ ಎಂಬ ಕಾಂಗ್ರೆಸ್ ಆರೋಪದಲ್ಲಿ ಹುರುಳಿಲ್ಲ ಎಂದು ತಳ್ಳಿ ಹಾಕಿದ್ದಾರೆ.

 ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ಈ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದರೆ, ಸಂವಿಧಾನವನ್ನು ಬದಲಾಯಿಸುತ್ತದೆ ಎಂದು ಆರೋಪ ಮಾಡುವ ಮೂಲಕ ಕಾಂಗ್ರೆಸ್‌ ಜನರನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿದೆ. ಅವರ ಆರೋಪ ಸಂಪೂರ್ಣವಾಗಿ ಆಧಾರರಹಿತವಾಗಿದೆ. ಒಂದು ವೇಳೆ ಸರ್ಕಾರ ಅಂತಹ ಪ್ರಯತ್ನ ನಡೆಸಿದರೆ, ನಾನು ಸಂಪುಟಕ್ಕೆ ರಾಜೀನಾಮೆ ನೀಡುತ್ತೇನೆ. ಅಲ್ಲದೆ, ಬಿಜೆಪಿಗೆ ನೀಡುತ್ತಿರುವ ಬೆಂಬಲವನ್ನು ಹಿಂಪಡೆಯುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಇತ್ತೀಚೆಗೆ ಸಂವಿಧಾನವನ್ನು ತಿದ್ದುಪಡಿ ಮಾಡಲು ಸಂಸತ್ತಿನ ಉಭಯ ಸದನಗಳಲ್ಲಿ ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ. ಅದಕ್ಕಾಗಿ, ಲೋಕಸಭೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದಿದ್ದರು. ಅವರ ಹೇಳಿಕೆಯ ಬಳಿಕ, ವಿಪಕ್ಷಗಳು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಬಿಜೆಪಿ, ‘ಆ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ’ ಎಂದಷ್ಟೇ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

Related Articles

ಇತ್ತೀಚಿನ ಸುದ್ದಿಗಳು